ಗುಜರಾತ್ ವಿರುದ್ಧ ಹೀನಾಯ ಸೋಲು; ಚೆನ್ನೈ ಸೂಪರ್ ಕಿಂಗ್ಸ್ ಪ್ಲೇಆಫ್ ಕನಸು ಭಗ್ನ

IPL-2026-Chennai-Super-Kings-300x190-1

ಅಹ್ಮದಾಬಾದ್: ಈ ಬಾರಿಯ ಐಪಿಎಲ್ ಟೂರ್ನಿಯ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ ತಂಡಕ್ಕೆ ಭಾರೀ ಹಿನ್ನಡೆಯಾಗಿದ್ದು, ಗುಜರಾತ್ ಟೈಟಾನ್ಸ್ ವಿರುದ್ಧ 89 ರನ್‌ಗಳ ಸೋಲು ಕಂಡು ಪ್ಲೇಆಫ್ ಕನಸು ಭಗ್ನಗೊಂಡಿದೆ.

ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟನ್ಸ್ ತಂಡ ಸಾಯಿ ಸುದರ್ಶನ್ (84), ಶುಭಮನ್ ಗಿಲ್ (64) ಹಾಗೂ ಜೋಸ್ ಬಟ್ಲರ್ (ಅಜೇಯ 57) ಅವರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 229 ರನ್ ಕಲೆಹಾಕಿತು.

ಬೃಹತ್ ಗುರಿ ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ ಆರಂಭದಲ್ಲೇ ವಿಕೆಟ್ ಕಳೆದುಕೊಂಡು ಒತ್ತಡಕ್ಕೆ ಸಿಲುಕಿತು. ಮೊಹಮ್ಮದ್ ಸಿರಾಜ್ ಆರಂಭಿಕ ಆಘಾತ ನೀಡಿದರೆ, ಕಗಿಸೊ ರಬಾಡ ಮತ್ತು ರಶೀದ್ ಖಾನ್ ಮಿಂಚಿನ ಬೌಲಿಂಗ್ ಪ್ರದರ್ಶಿಸಿದರು. ಪರಿಣಾಮ, ಸಿಎಸ್‌ಕೆ ತಂಡ ಕೇವಲ 13.4 ಓವರ್‌ಗಳಲ್ಲಿ 140 ರನ್‌ಗಳಿಗೆ ಸರ್ವಪತನ ಕಂಡಿತು.

ಈ ಮೂಲಕ ಗುಜರಾತ್ ಟೈಟನ್ಸ್ 89 ರನ್‌ಗಳ ಭರ್ಜರಿ ಜಯ ದಾಖಲಿಸಿ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿದೆ. ಇನ್ನೊಂದೆಡೆ, ಪ್ಲೇಆಫ್ ಪ್ರವೇಶದ ದೃಷ್ಟಿಯಿಂದ ಅತ್ಯಂತ ಮಹತ್ವದ ಪಂದ್ಯದಲ್ಲಿ ಸೋತ ಚೆನ್ನೈ ಸೂಪರ್ ಕಿಂಗ್ಸ್ ಟೂರ್ನಿಯಿಂದಲೇ ಹೊರಬಿದ್ದಿದೆ.