ಮಧ್ಯಪ್ರದೇಶದಲ್ಲಿ ಭೀಕರ ಅಪಘಾತ: ಬೆಂಗಳೂರು ಪೊಲೀಸ್ ಇನ್ಸ್‌ಪೆಕ್ಟರ್ ಸಾವು

0
Police-Vehicle-Hoysala-750x422-1-1

ಭೋಪಾಲ್: ಸೈಬರ್ ಕ್ರೈಂ ಪ್ರಕರಣದ ತನಿಖೆಗಾಗಿ ಮಧ್ಯಪ್ರದೇಶಕ್ಕೆ ತೆರಳಿದ್ದ ಬೆಂಗಳೂರು ಪೊಲೀಸ್ ಇನ್ಸ್‌ಪೆಕ್ಟರ್‌ ಒಬ್ಬರು ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ರಾಜ್‌ಗಢ ಜಿಲ್ಲೆಯ ಬಿಯೋರಾ ನಗರದಲ್ಲಿ ಶುಕ್ರವಾರ ಬೆಳಗ್ಗೆ ಈ ದುರ್ಘಟನೆ ಸಂಭವಿಸಿದೆ.

ಭೋಪಾಲ್‌ನಿಂದ ಇಂದೋರ್‌ಗೆ ತೆರಳುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಸುಮಾರು 30 ಅಡಿ ಎತ್ತರದ ಸೇತುವೆಗೆ ಡಿಕ್ಕಿ ಹೊಡೆದು ಕೆಳಗೆ ಉರುಳಿದೆ. ಅಪಘಾತದಲ್ಲಿ ಸೈಬರ್ ಕ್ರೈಂ ತಂಡದ ಇನ್ಸ್‌ಪೆಕ್ಟರ್ ರವಿ ಕೆ.ಬಿ. ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ. 11 ಮಂದಿ ಗಾಯಗೊಂಡಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಮೃತರನ್ನು ಇನ್ಸ್‌ಪೆಕ್ಟರ್ ರವಿ ಕೆ.ಬಿ., ಬಸ್ ಚಾಲಕ ವಿಕಾಸ್ ಶುಕ್ಲಾ, ಬೆಲಾಲ್ ಅಲಿ ಹಾಗೂ ಜ್ಯೋತಿರಾದಿತ್ಯ ಸಿಂಗ್ ಗೌಡ್ ಎಂದು ಗುರುತಿಸಲಾಗಿದೆ.

ಅಪಘಾತದಲ್ಲಿ ಬೆಂಗಳೂರಿನ ಸೈಬರ್ ಕ್ರೈಂ ತಂಡದ ಸಬ್‌ಇನ್‌ಸ್ಪೆಕ್ಟರ್ ರಮೇಶ್ ನಾಯಕ್, ಎಎಸ್‌ಐ ಶ್ರೀನಿವಾಸ್ ಹಾಗೂ ತಾಂತ್ರಿಕ ಸಿಬ್ಬಂದಿ ವಿಶ್ವನಾಥ್ ಗಾಯಗೊಂಡಿದ್ದಾರೆ. ಈ ಪೈಕಿ ಶ್ರೀನಿವಾಸ್ ಅವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಆರೋಪಿಯೊಬ್ಬನನ್ನು ಪತ್ತೆಹಚ್ಚುವ ಉದ್ದೇಶದಿಂದ ಬೆಂಗಳೂರಿನ ಸೈಬರ್ ಕ್ರೈಂ ತಂಡ ಮಧ್ಯಪ್ರದೇಶಕ್ಕೆ ತೆರಳಿತ್ತು ಎನ್ನಲಾಗಿದೆ. ಬೆಂಗಳೂರಿನಿಂದ ಇಂದೋರ್‌ಗೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.

ಪೊಲೀಸರ ಪ್ರಕಾರ, ಭೋಪಾಲ್ ಬೈಪಾಸ್‌ನ ಸೇತುವೆ ಬಳಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್‌ನಲ್ಲಿದ್ದ ನಾಲ್ವರು ಪ್ರಯಾಣಿಕರು ಹೊರಕ್ಕೆ ಎಸೆಯಲ್ಪಟ್ಟು, ಸುಮಾರು 30 ಅಡಿ ಕೆಳಗಿನ ಸರ್ವಿಸ್ ರಸ್ತೆಗೆ ಬಿದ್ದಿದ್ದಾರೆ. ಘಟನೆಯ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

Leave a Reply

Your email address will not be published. Required fields are marked *

You may have missed