ಅಂಗನವಾಡಿ ಕಾರ್ಯರ್ತೆಯರ ಹೋರಾಟಕ್ಕೆ ಅಡ್ಡಿ; ಟೆಂಟ್ ಕಿತ್ತುಹಾಕಿಸಿದ ಸರ್ಕಾರದ ವಿರುದ್ಧ ಆಕ್ರೋಶ

0
Anganavadi workers Protest

ಬೆಂಗಳೂರು: ರಾಜಧಾನಿಯ ಫ್ರೀಡಂ ಪಾರ್ಕ್ ನಲ್ಲಿ ಅಂಗನವಾಡಿ ಕಾರ್ಯರ್ತೆಯರ ಹೋರಾಟಕ್ಕೆ ಅಧಿಕಾರಿಗಳು ಅಡ್ಡಿಪಡಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಫ್ರೀಡಂ ಪಾರ್ಕ್ ನಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ ಕಾರ್ಯರ್ತೆಯರ ಮೇಲೆ ರಾಜ್ಯ ಕಾಂಗ್ರೆಸ್ ಸರ್ಕಾರ ಅಟ್ಟಹಾಸ ಮೆರೆದಿದ್ದು, ಪೊಲೀಸರ ಮೂಲಕ ಟೆಂಟ್ ಕಿತ್ತುಹಾಕಿಸಿ ಬಲವಂತವಾಗಿ ಪ್ರತಿಭಟನೆ ಅಂತ್ಯಗೊಳಿಸುವ ಮೂಲಕ ಹಿಟ್ಲರ್ ಧೋರಣೆ ತೋರಿದೆ ಎಂದು ಅಶೋಕ್ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿರುವ ಅವರು, ಚುನಾವಣೆ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಕೊಟ್ಟ ಆಶ್ವಾಸನೆ ಈಡೇರಿಸುವುದಕ್ಕಂತೂ ಕಾಂಗ್ರೆಸ್ ಸರ್ಕಾರಕ್ಕೆ ಯೋಗ್ಯತೆ ಇಲ್ಲ. ಕೊರೆಯುವ ಚಳಿಯನ್ನೂ ಲೆಕ್ಕಿಸದೆ ನಾಲ್ಕು ದಿನದಿಂದ ಅಹೋರಾತ್ರಿ ಪ್ರತಿಭಟನೆ ಮಾಡುತ್ತಿರುವ ಮಹಿಳೆಯರ ಬಳಿ ಹೋಗಿ ಕನಿಷ್ಠ ಪಕ್ಷ ಅವರನ್ನ ಸಮಾಧಾನ ಪಡಿಸುವ ಸೌಜನ್ಯವೂ ನಿಮ್ಮ ಸರ್ಕಾರಕ್ಕೆ ಇಲ್ಲ. ಈಗ ಅವರ ಶಾಂತಿಯುತ ಪ್ರತಿಭಟನೆಗೂ ಅಡ್ಡಿಪಡಿಸುವುದು ಯಾವ ನ್ಯಾಯ? ಎಂದು ಪ್ರಶ್ನಿಸಿದ್ದಾರೆ.

ತಮ್ಮ ನಾಯಕ ರಾಹುಲ್ ಗಾಂಧಿಯವರು ಹೋಗಿಬಂದಲ್ಲೆಲ್ಲ ತೋರಿಸುವ ಸಂವಿಧಾನದ ಪುಸ್ತಕದಲ್ಲಿ ಸಾಮಾನ್ಯ ನಾಗರಿಕರಿಗೆ ಪ್ರತಿಭಟನೆ ಮಾಡುವ ಹಕ್ಕಿಲ್ವಾ? ಅಥವಾ ನಮ್ಮ ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಏನಾದರೂ ಇದೆಯಾ? ಎಂದು ಪ್ರಶ್ನಿಒಸಿರುವ ಅಶೋಕ್, ನಿಮ್ಮ ಈ ಹಿಟ್ಲರ್ ಧೋರಣೆ ಜಾಸ್ತಿ ದಿನ ನಡೆಯುವುದಿಲ್ಲ. ನಿಮ್ಮ ಕಾಂಗ್ರೆಸ್ ಸರ್ಕಾರದ ವಿರುದ್ಧ ಕನ್ನಡಿಗರು ತಿರುಗಿ ಬೀಳುವ ದಿನ ಬಹಳ ದೂರವಿಲ್ಲ ಎಂದು ಕಿಡಿಕಾರಿದ್ದಾರೆ.

Leave a Reply

Your email address will not be published. Required fields are marked *

You may have missed