ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಅ. 23, 24ರಂದು ಗುಡುಗು ಸಹಿತ ಮಳೆ ಮುನ್ಸೂಚನೆ

ಬೆಂಗಳೂರು: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಅಕ್ಟೋಬರ್ 23 ಮತ್ತು 24ರಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಬೆಂಗಳೂರು ಮತ್ತು ಕೋಲಾರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಹವಾಮಾನ ಇಲಾಖೆ ತಜ್ಞ ಸಿ.ಎಸ್. ಪಾಟೀಲ್ ಈ ಮಾಹಿತಿ ನೀಡಿದ್ದಾರೆ.
ಮೈಸೂರು, ಚಾಮರಾಜನಗರ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ನೀಡಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಉಡುಪಿ ಜಿಲ್ಲೆಯಲ್ಲಿ ಸಾಧಾರಣದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದ್ದರೆ, ಉತ್ತರ ಕನ್ನಡ ಜಿಲ್ಲೆಯಲ್ಲಿ ಹಗುರ ಮಳೆಯಾಗಬಹುದು.

ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ರಾಮನಗರ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಕೆಲವು ಕಡೆ ಗುಡುಗು ಸಹಿತ ಮಳೆಯಾಗಬಹುದು. ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ.
ಉತ್ತರ ಒಳನಾಡಿನ ಗದಗ, ಹಾವೇರಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಹಗುರ ಮಳೆಯಾಗುವ ಸಾಧ್ಯತೆಯಿದೆ. ಈ ಭಾಗದ ಕೆಲವು ಜಿಲ್ಲೆಗಳಲ್ಲಿ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸಬಹುದು. ಅಕ್ಟೋಬರ್ 24ರಂದು ಧಾರವಾಡ ಮತ್ತು ಹಾವೇರಿ ಜಿಲ್ಲೆಗಳ ಕೆಲವೆಡೆ ಗುಡುಗು ಸಹಿತ ಹಗುರ ಮಳೆಯಾಗುವ ನಿರೀಕ್ಷೆಯಿದೆ. ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
