ಕಾಂಗ್ರೆಸ್‌ನಲ್ಲಿ ಸಿಎಂ ಆಯ್ಕೆ ಕಸರತ್ತು..! ಡಿಕೆಶಿಗೆ ಪಟ್ಟಾಭಿಷೇಕ ಖಚಿತವೇ..?

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ನೂತನ ಸಿಎಂ ಆಯ್ಕೆ ಸಂಬಂಧ ದೆಹಲಿ ಹೈಕಮಾಂಡ್ ಮಟ್ಟದಲ್ಲಿ ಮಹತ್ವದ ಚರ್ಚೆಗಳು ನಡೆಯುತ್ತಿವೆ.
ನಿರೀಕ್ಷೆಯಂತೆಯೇ ಡಿ.ಕೆ. ಶಿವಕುಮಾರ್ ಅವರೇ ಮುಂದಿನ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಅವರ ಬೆಂಬಲಿಗರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯ ರಾಜೀನಾಮೆ ನೀಡುವಂತೆ ಸೂಚನೆ ನೀಡಿದ ವರಿಷ್ಠರು, ಮುಂದಿನ ಸಿಎಂ ಯಾರು ಎಂಬುದರ ಬಗ್ಗೆ ಮೌನ ವಹಿಸಿದ್ದಾರೆ. ಹಾಗಾಗಿ, ಕಾಂಗ್ರೆಸ್ ಹೈಕಮಾಂಡ್ ನ ಅಧಿಕೃತ ಘೋಷಣೆ ಬಗ್ಗೆಯೇ ಕುತೂಹಲ.

ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ದೆಹಲಿಯಲ್ಲಿ ಹೈಕಮಾಂಡ್ ನಾಯಕರೊಂದಿಗೆ ಮಹತ್ವದ ಮಾತುಕತೆ ನಡೆಸಲಿದ್ದಾರೆ. ಸಿಎಂ ಆಯ್ಕೆ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಕಾಂಗ್ರೆಸ್ ನಾಯಕರು ಸ್ಪಷ್ಟಪಡಿಸಿದ್ದಾರೆ.
ಇನ್ನೊಂದೆಡೆ, ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಶನಿವಾರ ನಡೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಅದೇ ದಿನ ನೂತನ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕರಿಸುವ ಬಗ್ಗೆಯೂ ಮಾತುಗಳು ಕೇಳಿಬರುತ್ತಿವೆ.
ಆದರೆ, ಡಿ.ಕೆ. ಶಿವಕುಮಾರ್ ಅವರ ಜ್ಯೋತಿಷಿ ಸೂಚಿಸುವ ಸಮಯದ ಆಧಾರದ ಮೇಲೆ ಭಾನುವಾರ ಪ್ರಮಾಣ ವಚನ ಸ್ವೀಕಾರ ನಡೆಯುವ ಸಾಧ್ಯತೆಯೂ ಇದೆ ಎನ್ನಲಾಗಿದೆ.
