ತಾಯಿ ಚಾಮುಂಡೇಶ್ವರಿಗೆ 5 ವರ್ಷಗಳ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ
ಮೈಸೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಗೃಹ ಲಕ್ಷ್ಮಿ ಯೋಜನೆಯ ಭರ್ತಿ ಐದು ವರ್ಷಗಳ ಕಂತನ್ನು ಶಾಸಕ ದಿನೇಶ್ ಗೂಳಿಗೌಡ ಅವರು ತಾಯಿ ಚಾಮುಂಡೇಶ್ವರಿಗೆ ಸಮರ್ಪಿಸಿದ್ದಾರೆ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪರವಾಗಿ ಶಾಸಕ ದಿನೇಶ್ ಗೂಳಿಗೌಡ ಅವರು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ ನಾಡದೇವತೆ ಚಾಮುಂಡೇಶ್ವರಿ ದೇವಿ ದರ್ಶನ ಪಡೆದು ಹಣವನ್ನು ಅರ್ಪಿಸುವ ಮೂಲಕ ಸರ್ಕಾರದ ಹರಕೆ ತೀರಿಸಿದರು.
ಪ್ರತಿ ತಿಂಗಳಿಗೆ 2 ಸಾವಿರ ರೂ.ನಂತೆ 59 ತಿಂಗಳ ಕಂತಿನ ಹಣ ಒಟ್ಟು 1.18 ಲಕ್ಷ ರೂ.ಗಳನ್ನು ಸಚಿವೆ ಹೆಬ್ಬಾಳ್ಕರ್ ವೈಯಕ್ತಿಕವಾಗಿ ನೀಡಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ವಿಧಾನಸಭಾ ಚುನಾವಣೆಗೂ ಪೂರ್ವ ಮೇ 9 ರಂದು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಕೆ.ಜೆ.ಜಾರ್ಜ್, ದಿನೇಶ್ ಗೂಳಿಗೌಡ ಹಾಗೂ ಇತರ ಕಾಂಗ್ರೆಸ್ ನಾಯಕರು ಚಾಮುಂಡಿ ದೇವಿ ಸನ್ನಿಧಿಯಲ್ಲಿ ಗ್ಯಾರಂಟಿ ಕಾರ್ಡ್ ಗಳನ್ನಿಟ್ಟು ಹರಕೆ ಕಟ್ಟಿದ್ದರು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಶಕ್ತಿ ನೀಡುವಂತೆ ತಾಯಿಯಲ್ಲಿ ಬೇಡಿಕೊಂಡಿದ್ದರು. ಅದರಂತೆ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳೊಂದಿಗೆ ಅಭೂತಪೂರ್ವ ಜಯಭೇರಿ ಬಾರಿಸಿ ಅಧಿಕಾರವನ್ನು ಹಿಡಿದಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಕಳೆಯುವುದರೊಳಗೆ ಭರವಸೆ ನೀಡಿದ್ದಂತೆ ಐದರಲ್ಲಿ ನಾಲ್ಕು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲಾಗಿದೆ.
ಆಗಸ್ಟ್ 30 ರಂದು ಮೈಸೂರಿನಲ್ಲಿ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡುವ ಮೊದಲು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ನಾನು, ಶಾಸಕರಾದ ದಿನೇಶ್ ಗೂಳಿಗೌಡ ಇತರ ಪ್ರಮುಖರು ದೇವಿಯ ದರ್ಶನ ಮಾಡಿ ಹರಕೆ ತೀರಿಸಿದ್ದೆವು. ರಾಜ್ಯದ ಯಜಮಾನಿಯರ ಖಾತೆಗೆ ಪ್ರತಿ ತಿಂಗಳು ಜಮಾ ಮಾಡುವ ತಲಾ 2 ಸಾವಿರ ರೂ.ಗಳ ಮೊದಲ ಕಂತನ್ನು ತಾಯಿ ಚಾಮುಂಡೇಶ್ವರಿ ದೇವಿಗೆ ಅಂದು ಸಮರ್ಪಣೆ ಮಾಡಿದ್ದೆವು ಎಂದು ಹೆಬಾಳ್ಕರ್ ಹೇಳಿಕೆಯಲ್ಲಿ ವಿವರಿಸಿದ್ದಾರೆ.
ಪ್ರತಿ ತಿಂಗಳು ತಾಯಿ ಚಾಮುಂಡೇಶ್ವರಿ ದೇವಿಗೆ ಗೃಹಲಕ್ಷ್ಮಿ ಕಂತನ್ನು ನೀಡುವಂತೆ ಶಾಸಕ ದಿನೇಶ ಗೂಳಿಗೌಡ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರಲ್ಲಿ ಮನವಿ ಮಾಡಿದ್ದರು. ಅವರು ತಕ್ಷಣ ಈ ಕುರಿತು ಕ್ರಮ ವಹಿಸುವಂತೆ ಸೂಚಿಸಿದ್ದರು. ಆ ಹಿನ್ನೆಲೆಯಲ್ಲಿ ಒಂದೇ ಸಲ ಎಲ್ಲಾ ಕಂತಿನ ಹಣವನ್ನು ನಾಡದೇವಿಗೆ ಅರ್ಪಿಸಲಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಮೊದಲ ಕಂತನ್ನು ಸಿಎಂ, ಡಿಸಿಎಂ ಹಾಗೂ ನಾನು ತಾಯಿ ಚಾಮುಂಡೇಶ್ವರಿ ದೇವಿಗೆ ಅರ್ಪಿಸಿದ್ದೇವೆ. ಹಾಗಾಗಿ ಉಳಿದ 59 ತಿಂಗಳ ಹಣವನ್ನು ದೇವಿಗೆ ನಾನು ವೈಯಕ್ತಿಕವಾಗಿ ಸಲ್ಲಿಸುತ್ತಿದ್ದೇನೆ. ಈ ಮೊತ್ತವನ್ನು ಶಾಸಕರಾದ ದಿನೇಶ್ ಗೂಳಿಗೌಡ ಅವರ ಮೂಲಕ ಸಮರ್ಪಿಸುತ್ತಿದ್ದೇನೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.