ದುರ್ಗಕ್ಕೆ ಹರಿದು ಬಂದ ಭದ್ರಾ ಜಲ: ಜನರ ದಶಕಗಳ ಕನಸು ನನಸು

0
tunga-Bhadra-River-Thingabhadra-1

ಚಿತ್ರದುರ್ಗ, ಸೆ.20: ಭದ್ರಾ ಮೇಲ್ದಂಡೆ ಯೋಜನೆಯ ಮೂಲಕ ಬಯಲುಸೀಮೆಗೆ ಜೀವಜಲ ಹರಿಸುವ ರಾಜ್ಯ ಸರ್ಕಾರದ ಸಂಕಲ್ಪ ಸಾಕಾರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆ.24ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಿತ್ರದುರ್ಗಕ್ಕೆ ಆಗಮಿಸಿ ಭದ್ರಾ ಜಲಕ್ಕೆ ಗಂಗಾಪೂಜೆ ನೆರವೇರಿಸಲಿದ್ದಾರೆ. ಬಳಿಕ ನಗರದ ದಾವಣಗೆರೆ ರಸ್ತೆಯ ಮಾದಾರ ಚನ್ನಯ್ಯ ಗುರುಪೀಠದ ಬಳಿಯ ಮೈದಾನದಲ್ಲಿ ಬೃಹತ್ ಸಾರ್ವಜನಿಕ ಸಮಾರಂಭ ನಡೆಯಲಿದೆ ಎಂದು ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದರು.

ಕಾರ್ಯಕ್ರಮ ನಡೆಯಲಿರುವ ಸ್ಥಳಕ್ಕೆ ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲಿಸಿದ ಬಳಿಕ ಮಾತನಾಡಿದ ಅವರು, ಚಿತ್ರದುರ್ಗದ ದಶಕಗಳ ನೀರಿನ ಕನಸು ನನಸಾಗುತ್ತಿರುವುದು ಮಹತ್ವದ ಬೆಳವಣಿಗೆ ಎಂದರು.

ಭದ್ರಾ ಮೇಲ್ದಂಡೆ ಯೋಜನೆಯಡಿ ಚಿತ್ರದುರ್ಗ ಶಾಖಾ ಕಾಲುವೆಗೆ ಪ್ರಸ್ತುತ 3 ಟಿಎಂಸಿ ನೀರನ್ನು ಪ್ರಾಯೋಗಿಕವಾಗಿ ಹರಿಸಲಾಗುತ್ತಿದೆ. ತುಂಗಾ ನದಿಯಿಂದ 17.5 ಟಿಎಂಸಿ ನೀರನ್ನು ಲಿಫ್ಟ್ ಮಾಡುವ ಕಾರ್ಯವನ್ನು ನವೆಂಬರ್–ಡಿಸೆಂಬರ್ ಒಳಗೆ ಪೂರ್ಣಗೊಳಿಸಿ ಯೋಜನೆಯನ್ನು ಪೂರ್ಣ ಪ್ರಮಾಣದಲ್ಲಿ ಅನುಷ್ಠಾನಗೊಳಿಸುವಂತೆ ಮುಖ್ಯಮಂತ್ರಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ ಎಂದು ಚಲುವರಾಯಸ್ವಾಮಿ ಹೇಳಿದರು.

ಇದಕ್ಕಾಗಿ ಅಗತ್ಯ ಅರಣ್ಯ ಇಲಾಖೆಯ ಅನುಮತಿ ಪಡೆಯಲಾಗಿದ್ದು, ವಿದ್ಯುತ್ ಟವರ್‌ಗಳ ಕಾಮಗಾರಿಯನ್ನೂ ಚುರುಕುಗೊಳಿಸಲಾಗಿದೆ. ರಾಜ್ಯ ಸರ್ಕಾರ ಈಗಾಗಲೇ ಸುಮಾರು ₹12,000 ಕೋಟಿ ವೆಚ್ಚ ಮಾಡಿದೆ. ಕೇಂದ್ರ ಸರ್ಕಾರ ಘೋಷಿಸಿರುವ ₹5,300 ಕೋಟಿ ಅನುದಾನ ಇನ್ನೂ ಬಿಡುಗಡೆಯಾಗಿಲ್ಲ ಎಂದು ಸಚಿವರು ಹೇಳಿದರು.

ಯೋಜನೆಗಾಗಿ ನಿರಂತರವಾಗಿ ಒತ್ತಾಯಿಸಿದ್ದ ದಿವಂಗತ ಸಚಿವ ಡಿ. ಸುಧಾಕರ್ ಅವರ ಕಳಕಳಿಯನ್ನೂ ಅವರು ಸ್ಮರಿಸಿದರು.

ಸೆ.24ರಂದು ನಡೆಯಲಿರುವ ಮುಖ್ಯಮಂತ್ರಿಗಳ ಕಾರ್ಯಕ್ರಮವು ಈ ಭಾಗದ ಜನರ ದಶಕಗಳ ಕನಸನ್ನು ನನಸಾಗಿಸುವ ಮಹತ್ವದ ಸಂದರ್ಭವಾಗಿದೆ ಎಂದು ಚಲುವರಾಯಸ್ವಾಮಿ ಹೇಳಿದರು.

ಗಂಗಾಪೂಜೆ ಹಾಗೂ ಸಾರ್ವಜನಿಕ ಸಮಾರಂಭವನ್ನು ಅಚ್ಚುಕಟ್ಟಾಗಿ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಶಿಷ್ಟಾಚಾರ ಪಾಲನೆ, ಸಂಚಾರ ನಿರ್ವಹಣೆ, ಸಾರ್ವಜನಿಕರ ಸುಗಮ ಪ್ರವೇಶ ಹಾಗೂ ವೇದಿಕೆಯ ಮುಂಭಾಗದ ಜನರಿಗೆ ಗಂಗಾಪೂಜೆಯ ನೇರ ಪ್ರಸಾರ ವ್ಯವಸ್ಥೆ ಕಲ್ಪಿಸುವಂತೆ ನಿರ್ದೇಶನ ನೀಡಲಾಗಿದೆ.

ಸಾರ್ವಜನಿಕರಿಗೆ ಸುಸಜ್ಜಿತ ಊಟದ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಯಾವುದೇ ಲೋಪವಿಲ್ಲದೆ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಟಿ. ರಘುಮೂರ್ತಿ, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಆರ್. ಶಿವಣ್ಣ, ಉಪಾಧ್ಯಕ್ಷ ಡಿ.ಎನ್. ಮೈಲಾರಪ್ಪ, ಕುಡಾ ಅಧ್ಯಕ್ಷ ಎಂ.ಕೆ. ತಾಜ್‌ಪೀರ್, ಜಿಲ್ಲಾಧಿಕಾರಿ ಎಸ್. ರಮ್ಯಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ, ವಿಶ್ವೇಶ್ವರಯ್ಯ ಜಲನಿಗಮದ ವ್ಯವಸ್ಥಾಪಕ ನಿರ್ದೇಶಕ ಎಚ್.ಸಿ. ರಮೇಂದ್ರ, ಮುಖ್ಯ ಎಂಜಿನಿಯರ್ ರವಿಶಂಕರ್ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You may have missed