ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಣ್ಣ ನೀರಾವರಿ ಯೋಜನೆಗಳ ಕಾಮಗಾರಿ ಚುರುಕುಗೊಳಿಸಿ: ಭೋಸರಾಜು ಸೂಚನೆ

pilikula lake Mangalore

ಬೆಂಗಳೂರು: ಕೆ.ಸಿ ವ್ಯಾಲಿ, ಹೆಚ್. ಎನ್ ವ್ಯಾಲಿಯಲ್ಲಿ ಎರಡನೇ ಹಂತದ ಸಂಸ್ಕರಿಸಿದ ನೀರನ್ನ ಹರಿಸಲಾಗುತ್ತಿದೆ. ಈ ನೀರಿನ ಮೂರನೇ ಹಂತದ ಸಂಸ್ಕರಣೆ ಆ ಭಾಗದ ಜನರ ಹಾಗೂ ಜನಪ್ರತಿನಿಧಿಗಳ ಆಶಯವಾಗಿದೆ. ಈ ನಿಟ್ಟಿನಲ್ಲಿ ಬೆಂಗಳೂರು ಜಲಮಂಡಳಿ ಉಸ್ತುವಾರಿ ಸಚಿವರಾದ ಸಚಿವರೊಂದಿಗೆ ಸಮಾಲೋಚನೆ ನಡೆಸುವಂತೆ ಉಸ್ತುವಾರಿ ಸಚಿವರು ಹಾಗೂ ಜನಪ್ರತಿನಿಧಿಗಳ ಸಲಹೆಯ ಹಿನ್ನಲೆಯಲ್ಲಿ, ಸಭೆಯನ್ನು ಆಯೋಜಿಸುವುದಾಗಿ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಭೋಸರಾಜು ಭರವಸೆ ನೀಡಿದರು.

ವಿಧಾನಸೌಧದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಣ್ಣ ನೀರಾವರಿ ಯೋಜನೆಗಳ ಪ್ರಗತಿ ಕುರಿತ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಹೆಚ್. ಎನ್ ವ್ಯಾಲಿ ಏತ ನೀರಾವರಿ ಯೋಜನೆಯ ಅಡಿಯಲ್ಲಿ ಮೊದಲ ಹಂತದಲ್ಲಿ ಚಿಕ್ಕಬಳ್ಳಾಪುರ, ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳ ವ್ಯಾಪ್ತಿಯಲ್ಲಿ ಒಟ್ಟು 65 ಕೆರೆಗಳಿಗೆ ನೀರು ತುಂಬಿಸಲಾಗುತ್ತಿದೆ. ಎರಡನೇ ಹಂತದಲ್ಲಿ ಬಾಗೇಪಲ್ಲಿ ತಾಲ್ಲೂಕಿನ 24 ಕೆರೆಗಳಿಗೆ ನೀರು ತುಂಬಿಸುವ ಏತ ನೀರಾವರಿ ಯೋಜನೆಯ ಪ್ರಗತಿಯಲ್ಲಿದೆ ಎಂದವರು ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕಿನ ಏತ ನೀರಾವರಿ ಕಾಮಗಾರಿ ಪ್ರಗತಿಯಲ್ಲಿದ್ದು, ಕೊನೆಯ ಹಂತದ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುತ್ತಿದೆ. 38 ಕೆರೆಗಳನ್ನು ತುಂಬಿಸುವ ಈ ಯೋಜನೆಯ ಮೊದಲ ಹಂತ ಶೀಘ್ರ ಪೂರ್ಣಗೊಳಿಸಬೇಕು. ಈ ಕಾಮಗಾರಿ ಪೂರ್ಣಗೊಳಿಸುವಲ್ಲಿ ವಿಳಂಬವಾಗುತ್ತಿರುವ ಬಗ್ಗೆ ಸಚಿವರು ಅಧಿಕಾರಿಗಳನ್ನು ತರಾಟೆಗೆ ತಗೆದುಕೊಂಡರು. ತೀವ್ರಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸದೇ ಇದ್ದಲ್ಲಿ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.

ಬೆಂಗಳೂರು ನಗರದ ವೃಷಭಾವತಿ ವ್ಯಾಲಿಯಿಂದ ದ್ವಿತೀಯ ಹಂತದಲ್ಲಿ ಸಂಸ್ಕರಿಸಿದ 243 ಎಂ.ಎಲ್.ಡಿ ನೀರನ್ನು ಮೊದಲನೇ ಹಂತದಲ್ಲಿ ಬೆಂಗಳೂರು ನಗರ, ಗ್ರಾಮಾಂತರ ಮತ್ತು ತುಮಕೂರು ಜಿಲ್ಲೆಯ 70 ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿಯ ಟೆಂಡರ್ ಆಗಿದೆ. ಸರ್ವೇ ಕಾರ್ಯ ಮುಗಿದಿದ್ದು, ವಿನ್ಯಾಸ ತಯಾರಿಕಾ ಕಾರ್ಯ ಪ್ರಗತಿಯಲ್ಲಿದೆ. ಈ ಕಾಮಗಾರಿಯ ಪ್ರಾರಂಭಕ್ಕೆ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

You may have missed