ರೈಲು ನಿಲ್ದಾಣದಲ್ಲಿನ ಕಾಲ್ತುಳಿತ: ರೈಲ್ವೆ ಸಚಿವರ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ

ನವದೆಹಲಿ: ರಾಷ್ಟ್ರ ರಾಜಧಾನಿಯ ರೈಲು ನಿಲ್ದಾಣದಲ್ಲಿನ ಕಾಲ್ತುಳಿತ ಘಟನೆಯ ನೈತಿಕ ಹೊಣೆ ಹೊತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ.
ಶನಿವಾರ ರಾತ್ರಿ ಸಂಭವಿಸಿದ ಕಾಲ್ತುಳಿತದಲ್ಲಿ 18 ಮಂದಿ ಸಾವನ್ನಪ್ಪಿದ್ದಾರೆ. ಈ ಘಟನೆ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಕಾಂಗ್ರೆಸ್ ವಕ್ತಾರೆ ಸುಪ್ರಿಯಾ ಅವರು ಶ್ರಿನಾಟೆ, ವೈಷ್ಣವ್ ರಾಜೀನಾಮೆಗೆ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರಿಯಾದ ವ್ಯವಸ್ಥೆ ಇಲ್ಲದಿರುವುದರಿಂದಾಗಿ ಈ ದುರ್ಘಟನೆ ಸಂಭವಿಸಿದೆ ಎಂದು ಆರೋಪಿಸಿದರು.
ಈ ಘಟನೆಯ ನೈತಿಕ ಹೊಣೆ ಹೊತ್ತು ವೈಷ್ಣವ್ ರಾಜೀನಾಮೆ ನೀಡದಿದ್ದರೆ, ರೈಲು ನಿಲ್ದಾಣದಲ್ಲಿ ದುರಾವಸ್ಥೆಯಿಂದಾಗಿ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದರು.