BZ Zameer Ahmed Khan 3

ಬೆಂಗಳೂರು: ಬಡವರಿಗೆ ಮನೆ ಹಂಚಿಕೆಯಲ್ಲಿ ಕೇಳಿಬಂದಿರುವ ಭ್ರಷ್ಟಾಚಾರ ಆರೋಪಗಳನ್ನು ತಳ್ಳಿಹಾಕಿರುವ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಈ ಕುರಿತು ಸಮಗ್ರ ತನಿಖೆ ನಡೆಯಲಿ ಎಂದಿದ್ದಾರೆ.

ಹಣ ಪಡೆದು ಮನೆಗಳನ್ನು ಹಂಚಿಕೆ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ್ ಮಾಡಿರುವ ಆರೋಪ ರಾಜ್ಯ ರಾಜಕಾರಣದಲ್ಲಿ ಆಡಳಿತ ಪ್ರತಿಪಕ್ಷಗಳ ನಡುವೆ ಜಟಾಪಟಿಗೆ ಕಾರಣವಾಗಿದೆ. ಈ ಆರೋಪವನ್ನು ಮುಂದಿಟ್ಟು ಸರ್ಕಾರದ ವಿರುದ್ಧ ಸಮರ ಸಾರಿರುವ ಬಿಜೆಪಿ ನಾಯಕರು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ರಾಜೀನಾಮೆಗೆ ಒತ್ತಾಯಿಸಿದ್ದಾರೆ.

ಈ ನಡುವೆ ಆರೋಪಗಳನ್ನು ತಳ್ಳಿಹಾಕಿರುವ ವಸತಿ ಸಚಿವ ಜಮೀರ್ ಅಹ್ಮದ್ ಖಾನ್, ಮನೆ ಹಂಚಿಕೆ ಮಾಡಲು ಹಣ ತೆಗೆದುಕೊಳ್ಳುತ್ತಿರುವ ಬಗ್ಗೆ ಯಾವುದಾದರೂ ದಾಖಲೆ ಇದೆಯೇ? ಹಣಕ್ಕೆ ಬೇಡಿಕೆ ಇಟ್ಟವರು ಯಾರು ಎಂದು ಬಿ.ಆರ್. ಪಾಟೀಲ್ ನನಗೆ ಹೇಳಲಿ ಎಂದು ಸವಾಲು ಹಾಕಿದ್ದಾರೆ. ಲಂಚ ಪಡೆದವರ ವಿರುದ್ಧ ನಾವು ಕ್ರಮ ಕೈಗೊಳ್ಳುತ್ತೇವೆ, ಅವರನ್ನು ಬಿಡುವುದಿಲ್ಲ” ಎಂದು ಜಮೀರ್ ಅಹ್ಮದ್ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಬಿಆರ್ ಪಾಟೀಲ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ. ಈ ಬಗ್ಗೆ ತಾವು ಈಗಾಗಲೇ ಇಲಾಖಾ ತನಿಖೆಗೆ ಆದೇಶಿಸಿರುವುದಾಗಿ ತಿಳಿಸಿದರು. ‘ನಾನು ಸತ್ಯಹರಿಶ್ಚಂದ್ರ ಎಂದು ಹೇಳಿಕೊಳ್ತಿಲ್ಲ, ಆದರೆ ಬಡವರಿಂದ ಹಣ ಪಡೆಯುವಷ್ಟು ನಾನು ದಾರಿದ್ರ್ಯ ನನಗೆ ಬಂದಿಲ್ಲ’ ಎಂದು ಜಮೀರ್ ಹೇಳಿದರು.

ವಸತಿ ನಿಗಮದಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಬಿಜೆಪಿ ಆರೋಪಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರು ಒಂದು ಮನೆಯನ್ನಾದರೂ ಬಡವರಿಗೆ ಕೊಟ್ಟಿದ್ದಾರೆಯೇ? ಕೊಟ್ಟಿದ್ದಾರೆಂದು ಅವರು ಸಾಬೀತು ಮಾಡಲಿ, ನಾನು ರಾಜಕೀಯದಿಂದ ನಿವೃತ್ತಿ ಪಡೆಯುತ್ತೇನೆ ಎಂದು ಸವಾಲು ಹಾಕಿದ ವೈಖರಿಯೂ ಗಮನಸೆಳೆದಿದೆ.

Leave a Reply

Your email address will not be published. Required fields are marked *