ಸರ್ವ ಪಕ್ಷದ ನಿಯೋಗ ಭೇಟಿ ಬಗ್ಗೆ ಕೇಂದ್ರದಿಂದ ಬಾರದ ಉತ್ತರ

ಹುಬ್ಬಳ್ಳಿ: ಮಹದಾಯಿ, ಕೃಷ್ಣಾ ಮೇಲ್ದಂಡೆ, ಕಾವೇರಿ ವಿವಾದ ಸೇರಿದಂತೆ ಎಲ್ಲ ಯೋಜನೆಯ ಬಗ್ಗೆ ಕೇಂದ್ರಕ್ಕೆ ಒತ್ತಾಯಿಸಲು ಸರ್ವ ಪಕ್ಷದ ನಿಯೋಗದೊಂದಿಗೆ ತೆರಳಲು ಪ್ರಧಾನಮಂತ್ರಿಗಳ ಸಮಯ ಕೋರಿ ಪತ್ರ ಬರೆಯಲಾಗಿದ್ದು, ಕೇಂದ್ರದಿಂದ ಯಾವುದೇ ಉತ್ತರ ಬಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಮಹದಾಯಿ ಯೋಜನೆಗೆ ಚಾಲನೆ ನೀಡಲು ರಾಜ್ಯ ಸರ್ಕಾರ ತಯಾರಿದ್ದರೂ, ಕೇಂದ್ರ ಸರ್ಕಾರದಿಂದ ಅರಣ್ಯ ಮತ್ತು ಪರಿಸರ ಕ್ಲಿಯರೆನ್ಸ್ ದೊರೆತಿಲ್ಲ. ಇದಕ್ಕೆ ಸಂಬಂಧಿಸಿದ ಎಲ್ಲ ವರದಿಗಳನ್ನು ಕೇಂದ್ರಕ್ಕೆ ಕಳುಹಿಸಲಾಗಿದೆ ಎಂದರು.

ಜೆಡಿಎಸ್ ಪಕ್ಷಕ್ಕೆ ಯಾವುದೇ ಸಿದ್ಧಾಂತ ಇಲ್ಲ :

ಜೆಡಿಎಸ್ , ಬಿಜೆಪಿಯ ಬಿ ಟೀಂ ಎಂಬುದು ಸತ್ಯವಾಗುತ್ತಿದೆಯೇ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, ನಾನು ಜೆಡಿಎಸ್ ಬಿಜೆಪಿಯ ಬಿ ಟೀಂ ಎಂದು ಹೇಳಿದಾಗ ಅವರು ನನ್ನ ಮೇಲೆ ಸಿಟ್ಟಾಗಿದ್ದರು. ಜನತಾ ದಳ ಜಾತ್ಯಾತೀತ ಎಂದು ಹೆಸರಿಟ್ಟುಕೊಂಡಿರುವ ಪಕ್ಷ ಕೋಮುವಾದಿಗಳ ಜೊತೆ ಒಂದಾಗಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡರು ಯಾವ ಕಾರಣಕ್ಕೂ ಬೇರೆ ಪಕ್ಷಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದು ಹೇಳುತ್ತಿದ್ದರು. ಆದರೆ ಪಕ್ಷದ ಉಳಿವಿಗಾಗಿ ಬಿಜೆಪಿ ಜೊತೆ ಸೇರಿಕೊಳ್ಳುತ್ತಿರುವುದಾಗಿ ಶಾಸಕ ಜಿ.ಟಿ.ದೇವೇಗೌಡರು ಹೇಳಿರುವುದು, ಜೆಡಿಎಸ್ ಪಕ್ಷಕ್ಕೆ ಯಾವುದೇ ಸಿದ್ಧಾಂತ ಇಲ್ಲ ಎಂದು ತೋರಿಸುತ್ತದೆ. ಅಧಿಕಾರಕ್ಕಾಗಿ ಯಾವುದೇ ಕ್ರಮಕ್ಕೆ ಸಿದ್ಧ ಎಂಬುದನ್ನು ಅವರು ತೋರಿಸಿದ್ದಾರೆ ಎಂದು ತಿಳಿಸಿದರು.

ರೈತರು ವಿದ್ಯುತ್ ಸರಬರಾಜಿನ ವ್ಯತ್ಯಯಕ್ಕಾಗಿ ಹೋರಾಟ ನಡೆಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಆಗಸ್ಟ್ ತಿಂಗಳಲ್ಲಿ ಸರಿಯಾಗಿ ಮಳೆಯಾಗಿಲ್ಲ, ಬೇಸಿಗೆಯಲ್ಲಿ ಪಂಪಸೆಟ್ ಗಳನ್ನು ಸರಿಯಾದ ರೀತಿಯಲ್ಲಿ ನಿರ್ವಹಿಸಬೇಕು. ಇದರಿಂದ ವಿದ್ಯುತ್ ನ ಹೆಚ್ಚಿನ ಪ್ರಮಾಣದಲ್ಲಿ ಬಳಕೆಯಾಗಿದೆ. ರೈತರ ತೊಂದರೆಯನ್ನು ನೀಗಿಸಲು, ವಿದ್ಯುತ್ ನ್ನು ಹೊರಗಿನಿಂದ ಖರೀದಿಸಿ ವಿದ್ಯುತ್ ಸರಬರಾಜು ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

You may have missed