ಕೇಂದ್ರದ ಜೊತೆ ಮಾತನಾಡಿ ರಾಜ್ಯಕ್ಕೆ ಗೊಬ್ಬರ ಕೊಡಿಸಿ; ಸಂಸದರಿಗೆ ಸಿಎಂ ಆಗ್ರಹ

0
Siddaramaiah --

ಮಂಡ್ಯ: ಮಂಡ್ಯ ಜಿಲ್ಲೆಯ ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ ಒಂದೇ ದಿನ 1,146 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ ಸಿಎಂ ಸಿದ್ದರಾಮಯ್ಯ ಸೋಮವಾರ ಚಾಲನೆ ನೀಡಿದ್ದಾರೆ. ಅಭಿವೃದ್ಧಿಗೆ ಹಣ ಇಲ್ಲ ಎಂದು ಸುಳ್ಳು ಎರಚುವ ಬಿಜೆಪಿಗೆ ಇದು ನಮ್ಮ ಸರ್ಕಾರದ ಸವಾಲು ಎಂದವರು ಹೇಳಿದ್ದಾರೆ.

ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿ, ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ಮಾತನಾಡಿದ ಸಿಎಂ,. ಕಾವೇರಿ ಅಭಿವೃದ್ಧಿ ನಿಗಮ ಒಂದರಲ್ಲೇ ಎರಡು ವರ್ಷದಲ್ಲಿ 560 ಕೋಟಿ ರೂ. ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇವೆ. ನಾಲ್ಕು ವರ್ಷ ಬಿಜೆಪಿ ಸರ್ಕಾರ ಮದ್ದೂರಿನಲ್ಲಿ ಏನು ಮಾಡಿದೆ ಎನ್ನುವುದನ್ನು ಜನತೆಗೆ ತೋರಿಸಿ ಎಂದುಹೇಳಿದ್ದಾರೆ.

ಹಲವು ವರ್ಷಗಳಿಂದ ಬಾಕಿ ಉಳಿದಿದ್ದ ಮಂಡ್ಯ ಸಕ್ಕರೆ ಕಾರ್ಖಾನೆಯ ವಿದ್ಯುತ್ ಬಿಲ್ ಚುಕ್ತಾ ಮಾಡಿದ್ದು ನಾವು, ಕಾರ್ಖಾನೆಯ ಪುನಶ್ಚೇತನಕ್ಕೆ 52 ಕೋಟಿ ರೂಪಾಯಿ ಕೊಟ್ಟಿದ್ದು ನಾವು.‌ ಹಾಲು ಉತ್ಪಾದಕರ ಸಂಘದ ಮನವಿಗೆ ಸ್ಪಂದಿಸಿ ಹಾಲು ಉತ್ಪಾದಕರಿಗೆ ಲೀಟರ್ ಗೆ 5 ರೂ. ಸಹಾಯಧನ‌ ಒದಗಿಸಿದ್ದು ನಾವು. ಈಗ ಮತ್ತೆ ಮಂಡ್ಯ ಸಕ್ಕರೆ ಕಾರ್ಖಾನೆಗೆ 10 ಕೋಟಿ ರೂ. ಕೊಟ್ಟಿರುವುದು ನಮ್ಮ ಸರ್ಕಾರ. ಮಂಡ್ಯ ಕೃಷಿ ವಿಶ್ವವಿದ್ಯಾಲಯ ಆರಂಭಿಸಿ, ಅಗತ್ಯ ಅನುದಾನ‌ ಕೊಟ್ಟಿರುವುದು ನಾವು. ಇದು ಕಾಂಗ್ರೆಸ್ ಪಕ್ಷ ಮತ್ತು ಕಾಂಗ್ರೆಸ್ ಸರ್ಕಾರದ ಬದ್ಧತೆ ಎಂದು ಸಿಎಂ ಹೇಳಿದ್ದಾರೆ.

ನಾವು ಜಾರಿ ಮಾಡಿದ ಐದು ಗ್ಯಾರಂಟಿಗಳಿಂದಾಗಿ ರಾಜ್ಯದ ಜನರ ಕೊಳ್ಳುವ ಸಾಮರ್ಥ್ಯ ಹೆಚ್ಚಾಗಿ, ರಾಜ್ಯದ ಆರ್ಥಿಕತೆಗೆ ಶಕ್ತಿ ಬಂದಿದೆ. ಪರಿಣಾಮ ಇಡೀ ದೇಶದಲ್ಲಿ ರಾಜ್ಯದ ತಲಾ ಆದಾಯ ನಂಬರ್ ಒನ್ ಆಗಿದೆ. ಮಂಡ್ಯ ನಗರದಲ್ಲಿ 100 ಅಡಿ ರಸ್ತೆ ಮಾಡಲು ಶಾಸಕ ಉದಯ್ ಅವರ ಬೇಡಿಕೆಗೆ ನಮ್ಮ ಸರ್ಕಾರ ಒಪ್ಪಿಗೆ ಸೂಚಿಸಿದೆ. ಶಾಸಕ‌ ಉದಯ್ ಅವರದ್ದು ಕಡಿಮೆ ಮಾತು, ಹೆಚ್ಚು ಕೆಲಸ ಮಾಡುತ್ತಾರೆ ಎಂದರು.

ರಾಜ್ಯಕ್ಕೆ ಕೊಡಬೇಕಾದಷ್ಟು ಗೊಬ್ಬರ ಕೊಡದೆ ಕೇಂದ್ರ ಸರ್ಕಾರ ರಾಜ್ಯದ ರೈತರ ವಿರೋಧಿಯಾಗಿದೆ. ನಮ್ಮ ಸರ್ಕಾರ ಕೇಂದ್ರಕ್ಕೆ ಪತ್ರ ಬರೆದು ಅಗತ್ಯ ಗೊಬ್ಬರ ಸರಬರಾಜು ಮಾಡುವಂತೆ ಒತ್ತಾಯಿಸಿ ಒಂದು ವಾರ ಕಳೆದರೂ ಇದುವರೆಗೂ ಕೊಟ್ಟಿಲ್ಲ. ಬಿಜೆಪಿ ಸಂಸದರು ಮತ್ತು ರಾಜ್ಯ ಪ್ರತಿನಿಧಿಸುವ ಕೇಂದ್ರ ಸಚಿವರು ಕೇಂದ್ರದ ಜೊತೆ ಮಾತನಾಡಿ ಗೊಬ್ಬರ ಕೊಡಿಸಲಿ ಎಂದು ಸಲಹೆ ನೀಡಿದರು.

Leave a Reply

Your email address will not be published. Required fields are marked *

You may have missed