ಮುಂದಿನ ಸಿಎಂ ರೇಸಿನಲ್ಲಿ ಡಿಕೆಶಿ, ಪರಂ, ಬೈರೇಗೌಡ: ಹೊಸ ಮುಖಗಳತ್ತ ಹೈಕಮಾಂಡ್ ಚಿತ್ತ?

DKS-DK-Shivakumar-300x174-1

ನವದೆಹಲಿ: ರಾಜ್ಯ ರಾಜಕೀಯದಲ್ಲಿ ಭಾರೀ ಚಟುವಟಿಕೆ ಆರಂಭವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವ ಸಾಧ್ಯತೆ ಹಿನ್ನೆಲೆ ಕಾಂಗ್ರೆಸ್ ವಲಯದಲ್ಲಿ ರಾಜಕೀಯ ಚರ್ಚೆಗಳು ತೀವ್ರಗೊಂಡಿವೆ.

ಮೇ 28ರಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸುವ ಬಗ್ಗೆ ಸಿದ್ದರಾಮಯ್ಯ ಚಿಂತನೆ ನಡೆಸಿದ್ದಾರೆ ಎನ್ನಲಾಗುತ್ತಿದೆ. ಅದಕ್ಕೂ ಮುನ್ನ ಗುರುವಾರ ಸಚಿವ ಸಂಪುಟ ಸಭೆ ನಡೆಯಲಿದೆ.

ಇನ್ನೊಂದೆಡೆ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ. ಸಿ. ವೇಣುಗೋಪಾಲ್ ಹಾಗೂ ರಣದೀಪ್ ಸಿಂಗ್ ಸುರ್ಜೇವಾಲಾ ಬೆಂಗಳೂರಿಗೆ ಆಗಮಿಸಿ ಮುಂದಿನ ರಾಜಕೀಯ ಬೆಳವಣಿಗೆಗಳ ಮೇಲ್ವಿಚಾರಣೆ ನಡೆಸಲಿದ್ದಾರೆ. ಬಳಿಕ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆಯುವ ಸಾಧ್ಯತೆಯೂ ಇದೆ.

ಪ್ರಸ್ತುತ ರಾಜಕೀಯ ಲೆಕ್ಕಾಚಾರಗಳ ಪ್ರಕಾರ ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಮುಖ್ಯಮಂತ್ರಿ ಸ್ಥಾನಕ್ಕೆ ಮೊದಲ ಆಯ್ಕೆಯಾಗಿದ್ದಾರೆ.

ಆದರೆ 2028ರ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಸಂಪೂರ್ಣ ಹೊಸ ನಾಯಕತ್ವಕ್ಕೆ ಅವಕಾಶ ನೀಡುವ ಆಯ್ಕೆಯನ್ನೂ ಕಾಂಗ್ರೆಸ್ ಹೈಕಮಾಂಡ್ ಪರಿಗಣಿಸುತ್ತಿದೆ ಎನ್ನಲಾಗಿದೆ.

ಈ ಪೈಕಿ ಸಚಿವರಾದ ಕೃಷ್ಣ ಬೈರೇಗೌಡ ಹಾಗೂ ಜಿ. ಪರಮೇಶ್ವರ್ ಅವರ ಹೆಸರುಗಳೂ ಪ್ರಮುಖವಾಗಿ ಕೇಳಿಬರುತ್ತಿವೆ.