ಮೇಕೆದಾಟು ಸೇರಿ ರಾಜ್ಯದ ಪ್ರಮುಖ ಯೋಜನೆಗಳಿಗೆ ಕೇಂದ್ರದ ಅನುಮತಿ ಕೋರಿದ ಡಿಕೆಶಿ

0
DKS-meet-MODI-300x192-1

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ, ಮೇಕೆದಾಟು ಸೇರಿದಂತೆ ಕರ್ನಾಟಕದ ಹಲವು ಪ್ರಮುಖ ನೀರಾವರಿ, ಮೂಲಸೌಕರ್ಯ ಮತ್ತು ಅಭಿವೃದ್ಧಿ ಯೋಜನೆಗಳಿಗೆ ತ್ವರಿತ ಅನುಮೋದನೆ ಹಾಗೂ ವಿಶೇಷ ಅನುದಾನ ನೀಡುವಂತೆ ಮನವಿ ಸಲ್ಲಿಸಿದ್ದಾರೆ.

ನೀತಿ ಆಯೋಗದ ಸಭೆಯ ಬಳಿಕ ರಾಷ್ಟ್ರಪತಿ ಭವನದಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿಯಾದ ಡಿ.ಕೆ. ಶಿವಕುಮಾರ್, ಕರ್ನಾಟಕದ ಸಾಂಸ್ಕೃತಿಕ ರಾಯಭಾರಿ ಬಸವಣ್ಣ ಅವರ ಪ್ರತಿಮೆಯನ್ನು ಉಡುಗೊರೆಯಾಗಿ ನೀಡಿ, ರಾಜ್ಯದ ಅಭಿವೃದ್ಧಿ ಆದ್ಯತೆಗಳ ಕುರಿತು ಚರ್ಚಿಸಿದರು.

ಭೇಟಿಯ ವೇಳೆ ಮೇಕೆದಾಟು ಯೋಜನೆ ಕುರಿತು ವಿಶೇಷವಾಗಿ ಪ್ರಸ್ತಾಪಿಸಿದ ಅವರು, ಯೋಜನೆ ಬಗ್ಗೆ ನಿರ್ಧಾರ ಕೈಗೊಳ್ಳುವಂತೆ ಸುಪ್ರೀಂ ಕೋರ್ಟ್ ಈಗಾಗಲೇ ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ (CWMA) ಹಾಗೂ ಕೇಂದ್ರೀಯ ಜಲ ಆಯೋಗಕ್ಕೆ (CWC) ಸೂಚಿಸಿದೆ ಎಂದು ಗಮನ ಸೆಳೆದರು. ಯೋಜನೆಯ ಮೌಲ್ಯಮಾಪನ ಪ್ರಕ್ರಿಯೆಗೆ ವೇಗ ನೀಡಿ ಶೀಘ್ರ ಅನುಮತಿ ನೀಡುವಂತೆ ಪ್ರಧಾನಿಗೆ ಮನವಿ ಮಾಡಿದರು.

ಇದರ ಜೊತೆಗೆ ಕಳಸಾ-ಬಂಡೂರಿ ಯೋಜನೆ, ಭದ್ರಾ ಮೇಲ್ದಂಡೆ ಯೋಜನೆ, ಕೃಷ್ಣಾ ನದಿ ಯೋಜನೆಗಳು ಹಾಗೂ ಕೃಷ್ಣಾ ನ್ಯಾಯಮಂಡಳಿಯ ತೀರ್ಪಿನ ಗೆಜೆಟ್ ಅಧಿಸೂಚನೆ ಹೊರಡಿಸುವ ವಿಚಾರಗಳನ್ನೂ ಮುಂದಿಟ್ಟರು. ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್‌ನಲ್ಲಿ ಘೋಷಿಸಿದ ಅನುದಾನ ಬಿಡುಗಡೆ ಮಾಡುವಂತೆ ಒತ್ತಾಯಿಸಿದರು.

ರಾಜ್ಯದ ಅಭಿವೃದ್ಧಿಗಾಗಿ ಗ್ರಾಮ ಪಂಚಾಯಿತಿಗಳಿಗೆ 15ನೇ ಹಣಕಾಸು ಆಯೋಗದ ₹2,860 ಕೋಟಿ ಅನುದಾನ, ಬೆಂಗಳೂರು ನಗರ ಅಭಿವೃದ್ಧಿಗೆ ₹26,000 ಕೋಟಿ ವಿಶೇಷ ಪ್ಯಾಕೇಜ್, ಬೆಂಗಳೂರು ಉಪನಗರ ರೈಲು ಯೋಜನೆ, ಬೆಂಗಳೂರು-ಮುಂಬೈ ಹೈ-ಸ್ಪೀಡ್ ರೈಲು ಕಾರಿಡಾರ್, ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ, ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ₹25,000 ಕೋಟಿ ಅನುದಾನ ಹಾಗೂ ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆಗೆ ಸಹ ಕೇಂದ್ರದ ಸಹಕಾರ ಕೋರಿದರು.

ಈ ವೇಳೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾದ ಸಿಎಂ, ರಾಜ್ಯದ ಆರ್ಥಿಕ ಸುಧಾರಣೆಗಳು ಮತ್ತು ಅಭಿವೃದ್ಧಿ ಯೋಜನೆಗಳಿಗೆ ಹೆಚ್ಚುವರಿ ಹಣಕಾಸು ನೆರವು ನೀಡುವಂತೆ ಮನವಿ ಸಲ್ಲಿಸಿದರು. ಬೆಂಗಳೂರು ಮತ್ತು ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿಗೆ ವಿವಿಧ ಯೋಜನೆಗಳಡಿ ಸಾವಿರಾರು ಕೋಟಿ ರೂಪಾಯಿ ಅನುದಾನ ನೀಡುವಂತೆ ಕೋರಿದರು.

Leave a Reply

Your email address will not be published. Required fields are marked *