ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳಿಗೆ ಮರು ಅರ್ಜಿ ಕಡ್ಡಾಯ

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಗೃಹಲಕ್ಷ್ಮಿ ಹಾಗೂ ಗೃಹಜ್ಯೋತಿ ಯೋಜನೆಗಳ ಫಲಾನುಭವಿಗಳು ಮರು ಅರ್ಜಿ ಸಲ್ಲಿಸಬೇಕೆಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೂಚಿಸಿದ್ದಾರೆ.
ಯೋಜನೆಗಳ ದುರ್ಬಳಕೆಯನ್ನು ತಡೆಗಟ್ಟುವುದು ಹಾಗೂ ನೈಜ ಫಲಾನುಭವಿಗಳನ್ನು ಗುರುತಿಸುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಗೃಹಲಕ್ಷ್ಮಿ ಯೋಜನೆಯಡಿ ನೂರಾರು ಕೋಟಿ ರೂಪಾಯಿ ಹಣ ಈಗಾಗಲೇ ಮೃತಪಟ್ಟಿರುವ ವ್ಯಕ್ತಿಗಳ ಖಾತೆಗಳಿಗೆ ಜಮೆಯಾಗಿರುವುದು ಪರಿಶೀಲನೆಯ ವೇಳೆ ಬೆಳಕಿಗೆ ಬಂದಿದೆ. ಅಲ್ಲದೆ, ಹಲವು ಫಲಾನುಭವಿಗಳ ಬ್ಯಾಂಕ್ ಖಾತೆ ಮಾಹಿತಿಯಲ್ಲೂ ಸ್ಪಷ್ಟತೆ ಅಗತ್ಯವಿರುವುದರಿಂದ ಮರು ಪರಿಶೀಲನೆ ನಡೆಸಲಾಗುತ್ತಿದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಇದೇ ವೇಳೆ, ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ಸೌಲಭ್ಯ ಪಡೆಯುತ್ತಿರುವ ಸುಮಾರು 1.64 ಲಕ್ಷ ಫಲಾನುಭವಿಗಳೂ ಸಹ ಮರು ಅರ್ಜಿ ಸಲ್ಲಿಸಬೇಕಿದ್ದು, ಅರ್ಜಿಗಳ ಮರು ಪರಿಶೀಲನೆಯ ಬಳಿಕ ಅರ್ಹ ಫಲಾನುಭವಿಗಳಿಗೆ ಮಾತ್ರ ಯೋಜನೆಯ ಸೌಲಭ್ಯ ಮುಂದುವರಿಯಲಿದೆ ಎಂದು ಅವರು ತಿಳಿಸಿದ್ದಾರೆ.
