ಮೋದಿ ಸರ್ಕಾರದಿಂದ ಯುವಕರಿಗೆ ಅನ್ಯಾಯ; ದೇಶದಲ್ಲಿ ಹಿಟ್ಲರ್ಶಾಹಿ ಆಡಳಿತ: ಎಐಸಿಸಿ ಅಧ್ಯಕ್ಷರ ವಾಗ್ದಾಳಿ

ಕಲಬುರಗಿ: ಕೇಂದ್ರದ ಎನ್ಡಿಎ ಸರ್ಕಾರದ ವಿರುದ್ಧ ಜನರು ಬೇಸತ್ತಿದ್ದು, ಮೈತ್ರಿಕೂಟದ ನಾಯಕರು ಒಬ್ಬೊಬ್ಬರಾಗಿ ದೂರ ಸರಿಯುತ್ತಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.
ಕಲಬುರಗಿಯಲ್ಲಿ ಮಾತನಾಡಿದ ಅವರು, ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರು 2023ರಲ್ಲಿ ಎನ್ಡಿಎಗೆ ಬೆಂಬಲ ನೀಡಿದ್ದರು. ಆದರೆ, ಈಗ ತಮ್ಮ ನಿರ್ಧಾರ ತಪ್ಪಾಗಿತ್ತು ಎಂದು ಹೇಳಿ ಜನರ ಕ್ಷಮೆ ಕೇಳಿದ್ದಾರೆ ಎಂದು ತಿಳಿಸಿದರು.
ಎನ್ಡಿಎ ಮೈತ್ರಿಕೂಟಕ್ಕೆ ಮತ ನೀಡಿದವರಿಗೂ ಬಿಜೆಪಿ ಮತಗಳ್ಳತನದ ಮೂಲಕ ಗೆಲುವು ಸಾಧಿಸಿದೆ ಎಂಬುದು ಈಗ ಅರ್ಥವಾಗುತ್ತಿದೆ ಎಂದು ಖರ್ಗೆ ಟೀಕಿಸಿದರು.
ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ಗುರಿಯಾಗಿಸಿಕೊಂಡು ಬಿಜೆಪಿ ನಾಯಕರು ನಿರಂತರ ಟೀಕೆ ಮಾಡುತ್ತಿದ್ದಾರೆ. ರಾಹುಲ್ ಗಾಂಧಿ ಅವರ ಹೆಸರನ್ನು ಹೇಳಿಕೊಂಡು ಇನ್ನೆಷ್ಟು ದಿನ ರಾಜಕೀಯ ಮಾಡುತ್ತೀರಿ? ಹಿಂದೆ ಇಂದಿರಾ ಗಾಂಧಿ ಅವರನ್ನು ಟೀಕಿಸುತ್ತಿದ್ದ ಬಿಜೆಪಿ ನಾಯಕರು ಈಗ ರಾಹುಲ್ ಗಾಂಧಿ ಅವರನ್ನು ಟೀಕಿಸುವುದನ್ನೇ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ತಮ್ಮ ಕೆಲಸವನ್ನಾಗಿ ಮಾಡಿಕೊಂಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಯುವಕರಿಗೆ ಮೋದಿ ಮೇಲೆ ನಂಬಿಕೆ ಇಲ್ಲ
ಪ್ರಧಾನಿ ನರೇಂದ್ರ ಮೋದಿ ಒಂದರ ಮೇಲೊಂದು ತಪ್ಪುಗಳನ್ನು ಮಾಡುತ್ತಿದ್ದು, ದೇಶದ ಯುವಕರ ಭವಿಷ್ಯವನ್ನು ಹಾಳು ಮಾಡುತ್ತಿದ್ದಾರೆ ಎಂದು ಖರ್ಗೆ ಆರೋಪಿಸಿದರು. ವಿಶ್ವವಿದ್ಯಾಲಯಗಳಲ್ಲಿ ಶಿಕ್ಷಕರ ಕೊರತೆ ಕಾಡುತ್ತಿದ್ದರೂ, ಶಿಕ್ಷಣ ಕ್ಷೇತ್ರಕ್ಕೆ ಕೇಂದ್ರ ಸರ್ಕಾರ ಸೂಕ್ತ ಆದ್ಯತೆ ನೀಡುತ್ತಿಲ್ಲ. ಹೀಗಾಗಿ ಯುವಕರು ಪ್ರಧಾನಿ ಮೋದಿ ಅವರ ಮೇಲಿನ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆ ಎಂದು ಹೇಳಿದರು.
ಮೋದಿಯಿಂದ ಹಿಟ್ಲರ್ಶಾಹಿ ಆಡಳಿತ
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧವೂ ಖರ್ಗೆ ತೀವ್ರ ವಾಗ್ದಾಳಿ ನಡೆಸಿದರು. ಬಿಜೆಪಿ ಮತ್ತು ಪ್ರಧಾನಿ ಮೋದಿ ನೇತೃತ್ವಕ್ಕೆ ಅನುಕೂಲವಾಗುವಂತೆ ಚುನಾವಣಾ ಆಯೋಗ ನಡೆದುಕೊಂಡಿದೆ. ಬೋಗಸ್ ಮತದಾನಕ್ಕೆ ಅವಕಾಶ ನೀಡಲಾಗಿದೆ ಎಂಬ ಆರೋಪವನ್ನೂ ಮಾಡಿದರು.
ಚುನಾವಣಾ ಆಯೋಗದ ಲೋಪಗಳನ್ನು ಎತ್ತಿ ತೋರಿಸಿದರೂ ಪ್ರಧಾನಿ ಮೋದಿ ಯಾವುದೇ ಕ್ರಮ ಕೈಗೊಂಡಿಲ್ಲ. ಜ್ಞಾನೇಶ್ ಕುಮಾರ್ ಎಷ್ಟೇ ತಪ್ಪುಗಳನ್ನು ಮಾಡಿದರೂ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿಲ್ಲ ಎಂದು ದೂರಿದರು.
ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ದುರ್ಬಲಗೊಳಿಸಿ, ಅಧಿಕಾರವನ್ನು ತಮ್ಮ ಹಿಡಿತದಲ್ಲೇ ಉಳಿಸಿಕೊಳ್ಳುವ ಪ್ರಯತ್ನ ನಡೆಯುತ್ತಿದೆ. ಪ್ರಧಾನಿ ಮೋದಿ ಅವರು ಹಿಟ್ಲರ್ಶಾಹಿ ಆಡಳಿತ ನಡೆಸುತ್ತಿದ್ದಾರೆ. ದೇಶದ ಪ್ರತಿಯೊಬ್ಬ ನಾಗರಿಕನ ಭವಿಷ್ಯ ಮತ್ತು ಪ್ರಜಾಪ್ರಭುತ್ವದ ರಕ್ಷಣೆಗಾಗಿ ಕಾಂಗ್ರೆಸ್ ಹೋರಾಟ ನಡೆಸುತ್ತಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದರು.
