ಪುಲಿಕೇಶಿನಗರ ಸ್ಫೋಟ ಪ್ರಕರಣ: ವಿಧಿವಿಜ್ಞಾನ ವರದಿಗೆ ಕಾಯುತ್ತಿರುವ ಪೊಲೀಸರು

0
Karnataka-Police-1-1

ಬೆಂಗಳೂರು: ನಗರದ ಪುಲಿಕೇಶಿನಗರ ಪೊಲೀಸ್ ಠಾಣೆ ವ್ಯಾಪ್ತಿಯ ನಿರ್ಮಾಣ ಹಂತದ ಕಟ್ಟಡದಲ್ಲಿ ಸಂಭವಿಸಿದ ಅನುಮಾನಾಸ್ಪದ ಸ್ಫೋಟ ಪ್ರಕರಣದ ತನಿಖೆ ಮುಂದುವರಿದಿದ್ದು, ಸ್ಫೋಟದ ನಿಖರ ಕಾರಣ ಪತ್ತೆಹಚ್ಚಲು ಪೊಲೀಸರು ವಿಧಿವಿಜ್ಞಾನ ಪ್ರಯೋಗಾಲಯದ (ಎಫ್‌ಎಸ್‌ಎಲ್) ವರದಿಗಾಗಿ ಕಾಯುತ್ತಿದ್ದಾರೆ. ಸ್ಫೋಟಕ್ಕೆ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಬಳಸಲಾಗಿತ್ತೇ ಅಥವಾ ಬ್ಯಾಟರಿಗಳಿಂದ ಸ್ಫೋಟ ಸಂಭವಿಸಿತೇ ಎಂಬ ಆಯಾಮದಲ್ಲಿ ತನಿಖೆ ನಡೆಯುತ್ತಿದೆ.

ಅ. 20ರಂದು ಮಧ್ಯಾಹ್ನ ಸುಮಾರು 2.30ರ ವೇಳೆಗೆ ಪುಲಿಕೇಶಿನಗರದ ನಿರ್ಮಾಣ ಹಂತದ ಐದು ಅಂತಸ್ತಿನ ಕಟ್ಟಡದಲ್ಲಿ ಸ್ಫೋಟ ಸಂಭವಿಸಿತ್ತು. ಘಟನೆಯಲ್ಲಿ ಇಬ್ಬರು ಕಾರ್ಮಿಕರು ಗಾಯಗೊಂಡಿದ್ದರು. ಈ ಸಂಬಂಧ ಪುಲಿಕೇಶಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳ ಪರಿಶೀಲನೆ ಮತ್ತು ಸಾಕ್ಷ್ಯ ಸಂಗ್ರಹ ಕಾರ್ಯ ಕೈಗೊಳ್ಳಲಾಗಿದೆ. ಎಟಿಸಿ ಹಾಗೂ ಸ್ಥಳೀಯ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಪ್ರಕರಣದ ಕುರಿತು ಪ್ರತಿಕ್ರಿಯಿಸಿರುವ ಸಚಿವ ಪ್ರಿಯಾಂಕ್ ಖರ್ಗೆ, “ನಾವು ಈ ಬಗ್ಗೆ ಪರಿಶೀಲನೆ ನಡೆಸುತ್ತಿದ್ದೇವೆ. ಎಲ್ಲ ಮಾದರಿಗಳನ್ನು ವಿಧಿವಿಜ್ಞಾನ ಪರೀಕ್ಷೆಗೆ ಕಳುಹಿಸಲಾಗಿದೆ. ವರದಿ ಬಂದ ಬಳಿಕ ಹೆಚ್ಚಿನ ಮಾಹಿತಿ ನೀಡುತ್ತೇವೆ” ಎಂದು ತಿಳಿಸಿದ್ದಾರೆ.

ಇದೇ ವೇಳೆ, ಪ್ರಕರಣದ ಮಾಹಿತಿ ಪಡೆದಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಪೊಲೀಸರಿಂದ ತನಿಖೆಯ ವಿವರಗಳನ್ನು ಕೇಳಿದೆ ಎನ್ನಲಾಗಿದೆ. ವಿಧಿವಿಜ್ಞಾನ ವರದಿ ಬಂದ ಬಳಿಕ ಸ್ಫೋಟದ ಸ್ವರೂಪ ಮತ್ತು ಕಾರಣದ ಕುರಿತು ಹೆಚ್ಚಿನ ಸ್ಪಷ್ಟತೆ ದೊರೆಯುವ ನಿರೀಕ್ಷೆಯಿದ್ದು, ಅದರ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲು ಪೊಲೀಸರು ಮುಂದಾಗಿದ್ದಾರೆ.

Leave a Reply

Your email address will not be published. Required fields are marked *