ಐಟಿ ಕಂಪನಿಗಳಲ್ಲಿ ಕನ್ನಡಿಗರಿಗೆ ಅನ್ಯಾಯವಾದರೆ ಕ್ರಮ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

0
DKS-DK-Shivakumar-2

ಬೆಂಗಳೂರು: ಬೆಂಗಳೂರಿನ ಐಟಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶ ಕಲ್ಪಿಸುವಲ್ಲಿ ಅನ್ಯಾಯವಾಗುತ್ತಿದೆ ಎಂಬ ದೂರುಗಳು ಕೇಳಿಬರುತ್ತಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಕನ್ನಡ ಮಾತೃಭಾಷೆಯುಳ್ಳ ಅಭ್ಯರ್ಥಿಗಳನ್ನು ಕಡೆಗಣಿಸಲಾಗುತ್ತಿದೆ ಎಂಬ ಆರೋಪಗಳು ವಿಷಾದನೀಯ. ಕರ್ನಾಟಕದಲ್ಲಿ ಕನ್ನಡಿಗರ ಹಕ್ಕು, ಗೌರವ ಮತ್ತು ಉದ್ಯೋಗಾವಕಾಶಗಳನ್ನು ಯಾವುದೇ ಕಾರಣಕ್ಕೂ ನಿರ್ಲಕ್ಷಿಸಲು ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಅವರು ಹೇಳಿದ್ದಾರೆ.

ಬೆಂಗಳೂರು ಜಾಗತಿಕ ಮಟ್ಟದಲ್ಲಿ ಭಾರತದ ತಂತ್ರಜ್ಞಾನ ರಾಜಧಾನಿಯಾಗಿ ಗುರುತಿಸಿಕೊಂಡಿದೆ. ಕನ್ನಡಿಗರ ಪ್ರತಿಭೆ, ಕೌಶಲ್ಯ ಮತ್ತು ಸಾಮರ್ಥ್ಯದ ಬಗ್ಗೆ ಸರ್ಕಾರಕ್ಕೆ ಹೆಮ್ಮೆಯಿದೆ ಎಂದು ತಿಳಿಸಿದ ಅವರು, ಸ್ಥಳೀಯ ಯುವಜನರಿಗೆ ಸೂಕ್ತ ಅವಕಾಶಗಳು ದೊರೆಯಬೇಕು ಎಂಬ ಆಶಯ ವ್ಯಕ್ತಪಡಿಸಿದ್ದಾರೆ.

ಯಾವುದೇ ಖಾಸಗಿ ಸಂಸ್ಥೆಯು ಉದ್ದೇಶಪೂರ್ವಕವಾಗಿ ಕನ್ನಡಿಗರನ್ನು ಉದ್ಯೋಗಾವಕಾಶಗಳಿಂದ ವಂಚಿಸಿರುವುದು ಕಂಡುಬಂದರೆ, ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಎಚ್ಚರಿಸಿದ್ದಾರೆ.

ಕನ್ನಡಿಗರ ಹಿತಾಸಕ್ತಿಯನ್ನು ಕಾಪಾಡುವುದು ಹಾಗೂ ಅವರ ಸಮಸ್ಯೆಗಳಿಗೆ ಸ್ಪಂದಿಸುವುದು ಸರ್ಕಾರದ ಬದ್ಧತೆಯಾಗಿದೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *