ಅಶೋಕ್ ಜನಮನ–2026: ‘ರಾಜಕಾರಣವೆಂದರೆ ಜನಸಾಮಾನ್ಯರ ಬದುಕು ಕಟ್ಟಿಕೊಡುವ ಸೇವೆ’ ಎಂದ ಬಿ.ಕೆ. ಹರಿಪ್ರಸಾದ್

0
Putturu-Ashok-rai-janamana-Hariprasad-2

ಮಂಗಳೂರು: ರಾಜಕಾರಣವೆಂದರೆ ಸ್ವಂತ ಬದುಕನ್ನು ಕಟ್ಟಿಕೊಳ್ಳುವುದಲ್ಲ, ಜನಸಾಮಾನ್ಯರ ಬದುಕನ್ನು ರೂಪಿಸುವುದು. ಅಧಿಕಾರವು ದರ್ಪದ ಸಾಧನವಲ್ಲ, ಸಮಾಜದ ಕಟ್ಟಕಡೆಯ ವ್ಯಕ್ತಿಯ ಕಣ್ಣೀರು ಒರೆಸುವ ಜವಾಬ್ದಾರಿ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಹೇಳಿದ್ದಾರೆ.

ದಕ್ಷಿಣಕನ್ನಡ ಜಿಲ್ಲೆ ಪುತ್ತೂರಿನಲ್ಲಿ ಶಾಸಕ ಅಶೋಕ್ ಕುಮಾರ್ ರೈ ಆಯೋಜಿಸಿದ್ದ ‘ಅಶೋಕ್ ಜನಮನ–2026’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಕಳೆದ 14–15 ವರ್ಷಗಳಿಂದ ತಮ್ಮ ದುಡಿಮೆಯ ಒಂದು ಭಾಗವನ್ನು ಸಮಾಜಕ್ಕೆ ಮೀಸಲಿಟ್ಟು, ಸಾವಿರಾರು ಮಹಿಳೆಯರ ಮುಖದಲ್ಲಿ ಸಂತೋಷ ಮೂಡಿಸುತ್ತಿರುವ ಅಶೋಕ್ ರೈ ಅವರ ಸಾಮಾಜಿಕ ಬದ್ಧತೆ ಶ್ಲಾಘನೀಯ ಎಂದರು.

ಶಿಕ್ಷಣ, ಆರೋಗ್ಯ ಮತ್ತು ಉದ್ಯೋಗ ಸಮಾಜದ ಅಭಿವೃದ್ಧಿಯ ಪ್ರಮುಖ ಅಡಿಪಾಯಗಳಾಗಿವೆ. ಬಡವರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ, ಪ್ರತಿಯೊಬ್ಬರಿಗೂ ಉತ್ತಮ ಆರೋಗ್ಯ ಸೌಲಭ್ಯ ಹಾಗೂ ಯುವಜನತೆಗೆ ಗೌರವಯುತ ಉದ್ಯೋಗ ದೊರೆಯಬೇಕು. ಈ ಕ್ಷೇತ್ರಗಳಿಗೆ ಆದ್ಯತೆ ನೀಡುತ್ತಿರುವ ಅಶೋಕ್ ರೈ ಅವರ ಅಭಿವೃದ್ಧಿ ದೃಷ್ಟಿಕೋನ ಸ್ವಾಗತಾರ್ಹ ಎಂದು ಹೇಳಿದರು.

ಮಹಿಳೆಯರಿಗೆ ಗೌರವ ನೀಡುವುದರ ಜೊತೆಗೆ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಅಧಿಕಾರ ಕಲ್ಪಿಸಬೇಕು. ಮಹಿಳಾ ಮೀಸಲಾತಿಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು. ಕರಾವಳಿಯ ಸಾಂಸ್ಕೃತಿಕ ಅಸ್ಮಿತೆಯಾಗಿರುವ ತುಳು ಮತ್ತು ಕೊಡವ ಭಾಷೆಗಳಿಗೆ ಸಂವಿಧಾನದ ಎಂಟನೇ ಅನುಸೂಚಿಯಲ್ಲಿ ಸ್ಥಾನ ಕಲ್ಪಿಸಲು ಕೇಂದ್ರ ಸರ್ಕಾರ ಮುಂದಾಗಬೇಕು. ಈ ನಿಟ್ಟಿನಲ್ಲಿ ಹೋರಾಟ ಮುಂದುವರಿಯಲಿದೆ ಎಂದರು.

ಕಾರ್ಯಕ್ರಮದಲ್ಲಿ ವಿವಿಧ ಸಮುದಾಯಗಳ ಧರ್ಮಗುರುಗಳು, ಎಐಸಿಸಿ ಪ್ರಧಾನ ಕಾರ್ಯದರ್ಶಿ ಪಿ.ವಿ. ಮೋಹನ್, ಮಾಜಿ ಸಚಿವ ರಮಾನಾಥ್ ರೈ, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪದ್ಮರಾಜ್, ರೈ ಎಸ್ಟೇಟ್ ಎಜುಕೇಶನ್ ಅಂಡ್ ಚಾರಿಟೇಬಲ್ ಟ್ರಸ್ಟ್‌ನ ಪದಾಧಿಕಾರಿಗಳು ಹಾಗೂ ಸಾವಿರಾರು ಸಾರ್ವಜನಿಕರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *