ಕರ್ನಾಟಕ: ಬಂಟ್ವಾಳ ತಾಲೂಕು ಆಸ್ಪತ್ರೆಯಲ್ಲಿ ಮೊದಲ ಬಾರಿಗೆ ಸೊಂಟದ ಕೀಲು ಬದಲಾವಣೆ ಶಸ್ತ್ರಚಿಕಿತ್ಸೆ ಯಶಸ್ವಿ

0
Bantwal-Government-Hospital-Performs-First-Total-Hip-Replacement-Surgery

ಬಂಟ್ವಾಳ: ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಮೊದಲ ಬಾರಿಗೆ ಟೋಟಲ್ ಹಿಪ್ ರಿಪ್ಲೇಸ್‌ಮೆಂಟ್ (ಸೊಂಟದ ಕೀಲು ಬದಲಾವಣೆ) ಶಸ್ತ್ರಚಿಕಿತ್ಸೆಯನ್ನು ವೈದ್ಯರ ತಂಡ ಯಶಸ್ವಿಯಾಗಿ ನಡೆಸಿದೆ.

ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಆರೋಗ್ಯ ಸಚಿವ ಯು.ಟಿ. ಖಾದರ್, ಯಶೋಗಾಥೆ ಬರೆದಿರುವ ವೈದ್ಯರ ತಂಡವನ್ನು ಅಭಿನಂಧಿಸಿದ್ದಾರೆ.

ಬಂಟ್ವಾಳ ತಾಲೂಕಿನ 41 ವರ್ಷದ ವ್ಯಕ್ತಿಯೊಬ್ಬರು ಎಂಟು ತಿಂಗಳಿನಿಂದ ಎರಡೂ ಸೊಂಟಗಳಲ್ಲಿ ತೀವ್ರ ನೋವಿನಿಂದ ಬಳಲುತ್ತಿದ್ದರು. ಸೊಂಟದ ಮೂಳೆಗೆ ರಕ್ತ ಸಂಚಾರ ಕಡಿಮೆಯಾಗಿ ಮೂಳೆ ಹಾಳಾಗುವ ಕಾಯಿಲೆಯಿಂದ ಬಳಲುತ್ತಿದ್ದ ಅವರಿಗೆ ಶಸ್ತ್ರಚಿಕಿತ್ಸೆಯೊಂದೇ ಪರಿಹಾರವಾಗಿತ್ತು. ಖಾಸಗಿ ಆಸ್ಪತ್ರೆಯಲ್ಲಿ ಈ ಚಿಕಿತ್ಸೆಗೆ ಲಕ್ಷಾಂತರ ರೂಪಾಯಿ ವೆಚ್ಚವಾಗುತ್ತಿದ್ದರೂ, ಆಯುಷ್ಮಾನ್ ಭಾರತ್–ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ ಯೋಜನೆಯಡಿ ಬಂಟ್ವಾಳ ಸರ್ಕಾರಿ ಆಸ್ಪತ್ರೆಯಲ್ಲಿ ಸಂಪೂರ್ಣ ಉಚಿತವಾಗಿ ಚಿಕಿತ್ಸೆ ನೀಡಲಾಗಿದೆ.

ನವೆಂಬರ್ 4ರಂದು ಚಿಕಿತ್ಸೆಗೆ ಅರ್ಜಿ ಸಲ್ಲಿಸಲಾಗಿದ್ದು, 11ರಂದು ಅನುಮೋದನೆ ದೊರೆತಿದೆ. ನವೆಂಬರ್ 17ರಂದು ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಪೂರ್ಣಗೊಂಡಿದೆ. ಎರಡು ವಾರಗಳೊಳಗೆ ರೋಗಿಗೆ ಚಿಕಿತ್ಸೆ ದೊರೆತಿರುವುದು ಗಮನಾರ್ಹ ಎಂದು ಸಚಿವರು ಹೇಳಿದ್ದಾರೆ.

ದೊಡ್ಡ ಶಸ್ತ್ರಚಿಕಿತ್ಸೆಗಳಿಗಾಗಿ ಜನರು ನಗರಗಳ ಆಸ್ಪತ್ರೆಗಳಿಗೆ ಅಲೆದಾಡದೆ, ಸ್ಥಳೀಯ ಸರ್ಕಾರಿ ಆಸ್ಪತ್ರೆಗಳಲ್ಲೇ ಗುಣಮಟ್ಟದ ಚಿಕಿತ್ಸೆ ಪಡೆಯುವಂತಾಗಬೇಕು ಎಂಬುದು ಸರ್ಕಾರದ ಗುರಿಯಾಗಿದೆ. ತಾಲೂಕು ಆಸ್ಪತ್ರೆಗಳನ್ನು ಉನ್ನತ ಮಟ್ಟಕ್ಕೆ ಬೆಳೆಸುವ ಕಾರ್ಯ ಮುಂದುವರಿಯಲಿದೆ. ಬಂಟ್ವಾಳದ ಈ ಸಾಧನೆ ಸರ್ಕಾರಿ ಆರೋಗ್ಯ ವ್ಯವಸ್ಥೆಯ ಸಾಮರ್ಥ್ಯಕ್ಕೆ ಉತ್ತಮ ಉದಾಹರಣೆಯಾಗಿದೆ ಎಂದು ತಿಳಿಸಿದ್ದಾರೆ.

ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ, ಡಾ. ಅಭಿಷೇಕ್ ಶೆಟ್ಟಿ, ಮೂಳೆ ತಜ್ಞ ಡಾ. ಚೇತನ್‌ರಾಜ್ ಹಾಗೂ ಶಸ್ತ್ರಚಿಕಿತ್ಸೆಯಲ್ಲಿ ಪಾಲ್ಗೊಂಡ ವೈದ್ಯಕೀಯ ಸಿಬ್ಬಂದಿಗೆ ಸಚಿವರು ಅಭಿನಂದನೆ ಸಲ್ಲಿಸಿದ್ದಾರೆ. ಸಾರ್ವಜನಿಕರು ಆಯುಷ್ಮಾನ್ ಭಾರತ್–ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ ಯೋಜನೆಯ ಸೌಲಭ್ಯವನ್ನು ಸಂಪೂರ್ಣವಾಗಿ ಬಳಸಿಕೊಳ್ಳಬೇಕು ಮತ್ತು ಸಮೀಪದ ಸರ್ಕಾರಿ ಆಸ್ಪತ್ರೆಗಳ ಸೇವೆಯ ಮೇಲೆ ವಿಶ್ವಾಸವಿಟ್ಟು ಚಿಕಿತ್ಸೆ ಪಡೆಯಬೇಕು ಎಂದು ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *