ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳಿನ್ ಕುಮಾರ್ ರಾಜೀನಾಮೆ ಕೊಟ್ಟಿಲ್ಲ ಎಂದು ಬಿಜೆಪಿ ಸ್ಪಷ್ಟನೆ
ಬೆಂಗಳೂರು: ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳಿನ್ ಕುಮಾರ್ ಕಟೀಲ್ ರಾಜೀನಾಮೆ ಕೊಟ್ಟಿಲ್ಲ. ಈ ಕುರಿತಂತೆ ಮಾಧ್ಯಮಗಳಲ್ಲಿ ಬರುತ್ತಿರುವ ಮಾಹಿತಿ ಸತ್ಯಕ್ಕೆ ದೂರವಾದುದು ಎಂದು ಬಿಜೆಪಿ ತಿಳಿಸಿದೆ.
ಈ ಕುರಿತಂತೆ ಮಾಧ್ಯಮ ವರದಿಗಳನ್ನು ಉಲ್ಲೇಖಿಸಿ ನಳಿನ್ ಕುಮಾರ್ ಕಟೀಲ್ ಅವರ ಹೇಳಿಕೆಯನ್ನು ಬಿಡುಗಡೆಗೊಳಿಸಿರುವ ಬಿಜೆಪಿ ಮಾಧ್ಯಮ ಸಂಚಾಲಕರು, ಬಳ್ಳಾರಿಯಲ್ಲಿ ವಿ. ಸೋಮಣ್ಣ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷೆಯನ್ನು ಪ್ರಕಟಿಸಿದ ಬಗ್ಗೆ ಪ್ರತಿಕ್ರಿಯಿಸಿದ ಸಂದರ್ಭದಲ್ಲಿ ನಳಿನ್ ಕುಮಾರ್ ಕಟೀಲ್ ಅವರು ಪಕ್ಷದ ಸೋಲಿನ ನೈತಿಕ ಹೊಣೆ ಹೊರುತ್ತೇನೆ. ಸೋಲಿನ ಕಾರಣಗಳ ಕುರಿತಂತೆ ಪಕ್ಷದ ಹಿರಿಯರಿಗೆ ಮಾಹಿತಿ ನೀಡಿದ್ದೇನೆ. 4 ವರ್ಷಗಳಿಂದ ನಾನು ಅಧ್ಯಕ್ಷ ಸ್ಥಾನದಲ್ಲಿದ್ದೇನೆ ಎಂದು ತಿಳಿಸಿದ್ದರು ಸ್ಪಷ್ಟಪಡಿಸಿದ್ದಾರೆ.
ಪಕ್ಷದ ನೂತನ ರಾಜ್ಯಾಧ್ಯಕ್ಷರ ನೇಮಕ ಕುರಿತಂತೆ ಪಕ್ಷವು ಸೂಕ್ತ ಸಂದರ್ಭದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಅವರು ತಿಳಿಸಿದ್ದಾರೆಯೇ ಹೊರತು, ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾಗಿ ಹೇಳಿಲ್ಲ. ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿ ಸುದ್ದಿ ಬಿತ್ತರವಾಗುತ್ತಿದೆ ಎಂದು ಬಿಜೆಪಿ ಮಾಧ್ಯಮ ಸಂಚಾಲಕರು ಪ್ರಕಟಣೆ ಮೂಲಕ ಸ್ಪಷ್ಟಪಡಿಸಿದ್ದಾರೆ.