ಸಿಎಂ ಕಪ್-2026: ರಾಮಲಿಂಗಾರೆಡ್ಡಿ ಬ್ಯಾಟಿಂಗ್, ‘ಕ್ರೀಡೆಯಿಂದ ಆರೋಗ್ಯ’ ಎಂದ ಸಚಿವ

0
Ramalinga-Reddy-Cricket

ಬೆಂಗಳೂರು: ಯುವಕರು ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವುದರಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಧ್ಯ. ಆರೋಗ್ಯವಂತರಾಗಿದ್ದಾಗ ಕಲಿಕೆಯಲ್ಲಿಯೂ ಉತ್ತಮ ಸಾಧನೆ ಮಾಡಲು ಅನುಕೂಲವಾಗುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರದಲ್ಲಿ ರಾಜ್ಯ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಆಯೋಜಿಸಿರುವ ‘ಸಿ.ಎಂ. ಕಪ್-2026’ ಅಂತರ ಕಾಲೇಜು ಕ್ರಿಕೆಟ್ ಪಂದ್ಯಾವಳಿಯ ಮೂರನೇ ದಿನದ ಆಟಕ್ಕೆ ಬ್ಯಾಟಿಂಗ್ ಮಾಡುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

ರಾಜ್ಯ ಯುವ ಕಾಂಗ್ರೆಸ್ ಸಮಿತಿಯು ಯುವಕರನ್ನು ಸಂಘಟಿಸುವುದರ ಜತೆಗೆ ಹಲವು ಸಾಮಾಜಿಕ ಕಾರ್ಯಗಳಲ್ಲಿಯೂ ತೊಡಗಿಸಿಕೊಂಡಿರುವುದು ಶ್ಲಾಘನೀಯ. ಯುವಕರು ಪ್ರತಿದಿನ ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವ ಮೂಲಕ ದೈಹಿಕ ಸಾಮರ್ಥ್ಯ ಮತ್ತು ಮಾನಸಿಕ ಸದೃಢತೆಯನ್ನು ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯವೇ ಹೊರತು ಸೋಲು-ಗೆಲುವು ಮುಖ್ಯವಲ್ಲ. ಕ್ರೀಡೆಗಳು ಯುವಕರಲ್ಲಿ ಶಿಸ್ತು, ಆತ್ಮವಿಶ್ವಾಸ ಹಾಗೂ ತಂಡದ ಮನೋಭಾವವನ್ನು ಬೆಳೆಸುತ್ತವೆ. ಈ ನಿಟ್ಟಿನಲ್ಲಿ ರಾಜ್ಯದ ಪ್ರತಿ ಜಿಲ್ಲೆಯಲ್ಲಿಯೂ ಕ್ರೀಡಾಕೂಟಗಳನ್ನು ಆಯೋಜಿಸಿ, ಯುವ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಬೇಕು ಎಂದು ಹೇಳಿದರು.

ಪಂದ್ಯಾವಳಿಯಲ್ಲಿ ಒಟ್ಟು 32 ಕಾಲೇಜುಗಳ ತಂಡಗಳು ಭಾಗವಹಿಸಿವೆ. ಅಕ್ಟೋಬರ್ 4ರಂದು ಫೈನಲ್ ಪಂದ್ಯ ನಡೆಯಲಿದ್ದು, ವಿಜೇತ ತಂಡಕ್ಕೆ ₹2 ಲಕ್ಷ ಪ್ರಥಮ ಬಹುಮಾನ ಹಾಗೂ ರನ್ನರ್ ಅಪ್ ತಂಡಕ್ಕೆ ₹1 ಲಕ್ಷ ದ್ವಿತೀಯ ಬಹುಮಾನ ನೀಡಲಾಗುತ್ತದೆ. ಇದರೊಂದಿಗೆ ಪಂದ್ಯ ಪುರುಷೋತ್ತಮ, ಸರಣಿ ಶ್ರೇಷ್ಠ ಹಾಗೂ ಉತ್ತಮ ಬೌಲರ್ ಪ್ರಶಸ್ತಿಗಳನ್ನೂ ಪ್ರದಾನ ಮಾಡಲಾಗುತ್ತದೆ.

ಕಾರ್ಯಕ್ರಮದಲ್ಲಿ ರಾಜ್ಯ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಚ್.ಎಸ್. ಮಂಜುನಾಥಗೌಡ, ನಿಕಟಪೂರ್ವ ಬಿಬಿಎಂಪಿ ಸದಸ್ಯ ಎಸ್. ಕೇಶವಮೂರ್ತಿ, ಎಂ.ಇ.ಐ. ಅಧ್ಯಕ್ಷ ಎಸ್. ಮನೋಹರ್ ಹಾಗೂ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪರಿಸರ ರಾಮಕೃಷ್ಣ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *