ಪರಿಸರ ಸ್ನೇಹಿ ದೀಪಾವಳಿ ಆಚರಿಸಿ; ಹಸಿರು ಪಟಾಕಿಗಳಿಗೆ ಮಾತ್ರ ಅವಕಾಶ: ಸಚಿವ ರಾಮಲಿಂಗಾ ರೆಡ್ಡಿ ಕಿವಿಮಾತು

0
Deepavali-Green-Cracker-1

ಬೆಂಗಳೂರು: ಸಾರ್ವಜನಿಕರ ಆರೋಗ್ಯ ಮತ್ತು ಪರಿಸರ ಸಂರಕ್ಷಣೆಯ ದೃಷ್ಟಿಯಿಂದ 2026ರ ದೀಪಾವಳಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ರಾಮಲಿಂಗಾ ರೆಡ್ಡಿ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಪಟಾಕಿ ಸಿಡಿಸುವುದರಿಂದ ವಾಯು ಮತ್ತು ಶಬ್ದ ಮಾಲಿನ್ಯ ಉಂಟಾಗುವುದರ ಜೊತೆಗೆ ಮಕ್ಕಳು, ವೃದ್ಧರು, ಅನಾರೋಗ್ಯ ಪೀಡಿತರು ಹಾಗೂ ಪ್ರಾಣಿಗಳ ಆರೋಗ್ಯದ ಮೇಲೂ ದುಷ್ಪರಿಣಾಮ ಬೀರುತ್ತದೆ. ಪಟಾಕಿಗಳ ಅಸುರಕ್ಷಿತ ಸಂಗ್ರಹಣೆ ಮತ್ತು ಸ್ಫೋಟಗಳಿಂದ ಜೀವಹಾನಿ ಸಂಭವಿಸುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ ಎಂದು ಅವರು ತಿಳಿಸಿದ್ದಾರೆ.

ಸುಪ್ರೀಂ ಕೋರ್ಟ್ ನಿರ್ದೇಶನದಂತೆ ರಾತ್ರಿ 8ರಿಂದ 10 ಗಂಟೆಯವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶವಿದ್ದು, ಉಳಿದ ಸಮಯದಲ್ಲಿ ಪಟಾಕಿ ಸಿಡಿಸುವುದನ್ನು ನಿಷೇಧಿಸಲಾಗಿದೆ. ಅನುಮೋದಿತ ಹಸಿರು ಪಟಾಕಿಗಳನ್ನು ಹೊರತುಪಡಿಸಿ ಇತರ ಪಟಾಕಿಗಳ ಮಾರಾಟ ಮತ್ತು ಬಳಕೆಗೆ ನಿರ್ಬಂಧವಿದೆ.

ಹಸಿರು ಪಟಾಕಿಗಳಿಗೆ ಮಾತ್ರ ಅವಕಾಶ

ರಾಜ್ಯಾದ್ಯಂತ ನಿಷೇಧಿತ ಪಟಾಕಿಗಳ ಉತ್ಪಾದನೆ, ಸಂಗ್ರಹಣೆ, ಸಾಗಣೆ, ವಿತರಣೆ ಮತ್ತು ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಸಾರ್ವಜನಿಕರು ಅಧಿಕೃತ ಮಾರಾಟಗಾರರಿಂದ ಮಾತ್ರ ಹಸಿರು ಪಟಾಕಿಗಳನ್ನು ಖರೀದಿಸಬೇಕು. ಪ್ಯಾಕೆಟ್‌ಗಳ ಮೇಲಿರುವ ಅಧಿಕೃತ ಹಸಿರು ಗುರುತು, ಕ್ಯೂಆರ್ ಕೋಡ್ ಮತ್ತು ಪ್ರಮಾಣೀಕರಣವನ್ನು ಪರಿಶೀಲಿಸಬೇಕು ಎಂದು ಸಚಿವರು ಸೂಚಿಸಿದ್ದಾರೆ.

ಜಿಲ್ಲಾಧಿಕಾರಿಗಳು, ಪೊಲೀಸ್ ಇಲಾಖೆ, ಸ್ಥಳೀಯ ಸಂಸ್ಥೆಗಳು ಹಾಗೂ ಸಂಬಂಧಪಟ್ಟ ಇಲಾಖೆಗಳು ಮಾರಾಟ ಮಳಿಗೆಗಳನ್ನು ಪರಿಶೀಲಿಸಿ ನಿಯಮ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಹಸಿರು ಪಟಾಕಿಗಳ ಹೆಸರಿನಲ್ಲಿ ನಕಲಿ ಅಥವಾ ಅನುಮೋದನೆಯಿಲ್ಲದ ಪಟಾಕಿಗಳ ಮಾರಾಟ ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.

ಮಾಲಿನ್ಯ ನಿಯಂತ್ರಣಕ್ಕೆ ಕ್ರಮ

ಆಸ್ಪತ್ರೆಗಳು, ಶಾಲೆಗಳು, ವೃದ್ಧಾಶ್ರಮಗಳು ಮತ್ತು ಸೂಕ್ಷ್ಮ ಪ್ರದೇಶಗಳ ಸಮೀಪ ಪಟಾಕಿ ಸಿಡಿಸುವುದನ್ನು ತಪ್ಪಿಸುವಂತೆ ಜಾಗೃತಿ ಮೂಡಿಸಬೇಕು. ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ವಿವಿಧ ಇಲಾಖೆಗಳ ಸಮನ್ವಯ ಸಭೆ ನಡೆಸಿ ಮಾಲಿನ್ಯ ನಿಯಂತ್ರಣಕ್ಕೆ ಕ್ರಿಯಾ ಯೋಜನೆ ರೂಪಿಸಬೇಕು. ಸಾರ್ವಜನಿಕ ಸ್ಥಳಗಳು ಮತ್ತು ವಸತಿ ಪ್ರದೇಶಗಳಲ್ಲಿ ಪಟಾಕಿ ತ್ಯಾಜ್ಯವನ್ನು ತಕ್ಷಣ ತೆರವುಗೊಳಿಸಲು ಸ್ಥಳೀಯ ಸಂಸ್ಥೆಗಳು ಕ್ರಮ ಕೈಗೊಳ್ಳಬೇಕು.

ನಿಯಮ ಉಲ್ಲಂಘನೆ ಅಥವಾ ನಿಷೇಧಿತ ಪಟಾಕಿಗಳ ಬಳಕೆ ಕಂಡುಬಂದಲ್ಲಿ ಸಾರ್ವಜನಿಕರು ಪೊಲೀಸ್ ಇಲಾಖೆ, ಸ್ಥಳೀಯ ಸಂಸ್ಥೆಗಳು ಅಥವಾ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ಮಾಹಿತಿ ನೀಡಬೇಕು. ಶಾಲಾ-ಕಾಲೇಜುಗಳಲ್ಲಿ ಹಾಗೂ ಸಾಮಾಜಿಕ ಮಾಧ್ಯಮಗಳ ಮೂಲಕ ಪರಿಸರ ಸ್ನೇಹಿ ದೀಪಾವಳಿ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ನಡೆಸುವಂತೆಯೂ ಸೂಚಿಸಲಾಗಿದೆ.

“ಹಸಿರು ಪಟಾಕಿಗಳನ್ನು ಮಾತ್ರ ಬಳಸೋಣ, ಪಟಾಕಿಗಳ ಬಳಕೆಯನ್ನು ಮಿತಿಗೊಳಿಸೋಣ. ವಾಯು ಮತ್ತು ಶಬ್ದ ಮಾಲಿನ್ಯ ಕಡಿಮೆ ಮಾಡಿ ಆರೋಗ್ಯಕರ ಹಾಗೂ ಸ್ವಚ್ಛ ಪರಿಸರವನ್ನು ಕಾಪಾಡೋಣ” ಎಂದು ರಾಮಲಿಂಗಾ ರೆಡ್ಡಿ ಮನವಿ ಮಾಡಿದ್ದಾರೆ.

 

Leave a Reply

Your email address will not be published. Required fields are marked *

You may have missed