ಹಾವೇರಿ ಮೆಡಿಕಲ್ ಕಾಲೇಜಿಗೆ ಸಂತ ಕನಕದಾಸರ ಹೆಸರು: ಮುಖ್ಯಮಂತ್ರಿ ಘೋಷಣೆ

0
DKS-Haveri-kanaka-Jayanthi-2026

ಹಾವೇರಿ: ಹಾವೇರಿಯ ಮೆಡಿಕಲ್ ಕಾಲೇಜಿಗೆ ಸಂತ ಕನಕದಾಸರ ಹೆಸರಿಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದ್ದಾರೆ.

ಹಾವೇರಿ ಜಿಲ್ಲೆಯ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದಲ್ಲಿ ನಡೆದ ಭಕ್ತಶ್ರೇಷ್ಠ ಶ್ರೀ ಕನಕದಾಸರ ಜಯಂತ್ಯೋತ್ಸವ–2026 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮೆಡಿಕಲ್ ಕಾಲೇಜನ್ನು ‘ಸಂತ ಕನಕದಾಸ ಮೆಡಿಕಲ್ ಕಾಲೇಜು’ ಎಂದು ಮರುನಾಮಕರಣ ಮಾಡುವ ಮೂಲಕ ಅವರ ಹೆಸರನ್ನು ಶಾಶ್ವತವಾಗಿ ಉಳಿಸಲಾಗುವುದು ಎಂದರು.

ಕಾಗಿನೆಲೆ ಶ್ರೀಗಳ ಬೇಡಿಕೆಯಂತೆ ವಿದ್ಯಾರ್ಥಿ ನಿಲಯಕ್ಕೆ ₹5 ಕೋಟಿ ಅನುದಾನ ನೀಡಲಾಗುವುದು. ಭೂಮಿ ನೀಡುವ ಬೇಡಿಕೆಯನ್ನು ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನಿಸಲಾಗುವುದು. ಕಾಗಿನೆಲೆಯನ್ನು ಜಾಗತಿಕ ಮಟ್ಟದ ಪ್ರವಾಸಿ ಕೇಂದ್ರವಾಗಿ ಅಭಿವೃದ್ಧಿಪಡಿಸಲು ಮಾಸ್ಟರ್ ಪ್ಲಾನ್ ರೂಪಿಸುವ ಚಿಂತನೆಯೂ ಇದೆ ಎಂದು ತಿಳಿಸಿದರು.

ಗ್ರಾಮೀಣ ವಿದ್ಯಾರ್ಥಿಗಳಿಗೆ ವೃತ್ತಿಪರ ಶಿಕ್ಷಣ ಪ್ರವೇಶದಲ್ಲಿ ನೀಡಲಾಗುತ್ತಿದ್ದ ಶೇ.15ರಷ್ಟು ಮೀಸಲಾತಿಯಲ್ಲಿ ಶೇ.7.5ರಷ್ಟನ್ನು ಸರ್ಕಾರಿ ಶಾಲೆಗಳಲ್ಲಿ ಓದಿದ ಮಕ್ಕಳಿಗೆ ನೀಡಲು ಸರ್ಕಾರ ನಿರ್ಧರಿಸಿದೆ ಎಂದರು.

ಕನಕದಾಸರು ಜಾತಿ ತಾರತಮ್ಯದ ವಿರುದ್ಧ ಕೀರ್ತನೆಗಳ ಮೂಲಕ ಹೋರಾಡಿದ ಮಹಾನ್ ಕ್ರಾಂತಿಕಾರಿ. ಅವರ ಸಮಾನತೆಯ ತತ್ವಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಬ್ಯಾಡಗಿ ಕ್ಷೇತ್ರದ ಗುಡ್ಡದ ಮಲ್ಲಾಪುರ ಏತ ನೀರಾವರಿ ಯೋಜನೆಯಡಿ 137 ಕೆರೆಗಳಿಗೆ ನೀರು ತುಂಬಿಸಲು ₹115 ಕೋಟಿಗೂ ಹೆಚ್ಚು ಅನುದಾನಕ್ಕೆ ಅನುಮೋದನೆ ನೀಡಲಾಗಿದೆ ಎಂದರು. ಸಿದ್ದರಾಮಯ್ಯ ಅವರ ಮಾರ್ಗದರ್ಶನದಲ್ಲಿ ಸರ್ಕಾರ ಮುಂದುವರಿಯುತ್ತಿದ್ದು, ಅವರ ಕೈ ಬಲಪಡಿಸುವುದು ತಮ್ಮ ಕರ್ತವ್ಯ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಗದ್ಗುರು ಶ್ರೀ ನಿರಂಜನಾನಂದಪುರಿ ಮಹಾಸ್ವಾಮೀಜಿ, ಸಚಿವ ರುದ್ರಪ್ಪ ಲಮಾಣಿ, ಶಾಸಕರು ಹಾಗೂ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *