ಕಳಸಾ ಬಂಡೂರಿ ಯೋಜನೆಗೆ ಆಗ್ರಹಿಸಿ ಬೆಂಗಳೂರಿನಲ್ಲಿ ಚಿತ್ರರಂಗದಿಂದ ಬೃಹತ್ ಪ್ರತಿಭಟನೆ

0
KALSA BANDURI- FILM

ಬೆಂಗಳೂರು: ಕಳಸಾ-ಬಂಡೂರಿ ಮತ್ತು ಮಹದಾಯಿ ನದಿ ಯೋಜನೆಗೆ ಆಗ್ರಹಿಸಿ ಉತ್ತರ ಕರ್ನಾಟಕದಲ್ಲಿ ನಡೆಯುತ್ತಿರುವ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿರುವ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ, ಗೋವಾ ಸರ್ಕಾರದ ಧೋರಣೆ ಖಂಡಿಸಿ ಶುಕ್ರವಾರ ಪಣಜಿಯಲ್ಲಿ ನಡೆದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಬಹಿಷ್ಕರಿಸಿದೆ.
ಗೋವಾ ಸರ್ಕಾರದ ಧೋರಣೆ ಹಾಗೂ ಬೈನಾ ಬೀಚ್ ನಲ್ಲಿ ಕನ್ನಡಿಗರನ್ನು ಒಕ್ಕಲೆಬ್ಬಿಸಿರುವುದನ್ನು ಖಂಡಿಸಿ ಶುಕ್ರವಾರ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಿಂದ ಕಲಾವಿದರು, ತಂತ್ರಜ್ಞರು, ಕಾರ್ಮಿಕರ ಒಕ್ಕೂಟದ ಸದಸ್ಯರು ಸೇರಿದಂತೆ ನೂರಾರು ಮಂದಿ ನಟ, ನಟಿಯರು, ರೇಸ್ ಕೋರ್ಸ್ ರಸ್ತೆಯಲ್ಲಿರುವ ಗಾಂಧಿ ಪ್ರತಿಮೆವರೆಗೂ ಪ್ರತಿಭಟನೆ ನಡೆಸಿದರು.
ಈ ಪ್ರತಿಭಟನೆಯಲ್ಲಿ ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್, ಹಿರಿಯ ನಟ ಶ್ರೀನಾಥ್, ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ನಟಿಯರಾದ ರಾಗಿಣಿ ದ್ವಿವೇದಿ, ಸಂಜನಾ ಪಾಲ್ಗೊಂಡು, ಗೋವಾ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಕಳಸಾ-ಬಂಡೂರಿ ನಾಲಾ ಯೋಜನೆಗಾಗಿ ಗೋವಾ ಸರ್ಕಾರ ಅನುಸರಿಸುತ್ತಿರುವ ಧೋರಣೆಯನ್ನು ಖಂಡಿಸಿದರು. ತಕ್ಷಣ ಪ್ರಧಾನ ಮಂತ್ರಿ ಮಧ್ಯ ಪ್ರವೇಶಿಸಿ ಸಮಸ್ಯೆ ಬಗೆಹರಿಸಬೇಕು ಎಂದು ಆಗ್ರಹಿಸಿದರು. ಈ ವೇಳೆ ಪ್ರತಿಕ್ರಿಯೆ ನೀಡಿದ ಕರ್ನಾಟಕ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ. ಗೋವಿಂದು, 100ಕ್ಕೂ ಹೆಚ್ಚು ದಿನಗಳಿಂದ ಕಳಸಾ-ಬಂಡೂರಿ ನಾಲಾ ಯೋಜನೆಗೆ ಆಗ್ರಹಿಸಿ ಉತ್ತರ ಕರ್ನಾಟಕದಲ್ಲಿ ರೈತರು ಹೋರಾಟ ನಡೆಸುತ್ತಿದ್ದಾರೆ. ಅವರಿಗೆ ಬೆಂಬಲ ನೀಡುವ ಸಲುವಾಗಿ ಗೋವಾದಲ್ಲಿ ಆರಂಭವಾದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಬಹಿಷ್ಕರಿಸಿದ್ದೇವೆ. ಕುಡಿಯುವ ನೀರಿನ ವಿಚಾರದಲ್ಲಿ ರಾಜಕೀಯ ಮಾಡಬಾರದು. ತಕ್ಷಣವೇ ಪ್ರಧಾನಿಯವರು ಮಧ್ಯ ಪ್ರವೇಶಿಸಿ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಒತ್ತಾಯಿಸಿದರು.

Leave a Reply

Your email address will not be published. Required fields are marked *

You may have missed