ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಸಿಕ್ಕ ಜಯ; ₹2 ಸಾವಿರ ಗೌರವಧನ ಹೆಚ್ಚಳಕ್ಕೆ ಸರ್ಕಾರ ಒಪ್ಪಿಗೆ

ಬೆಂಗಳೂರು: ಕಳೆದ 12 ದಿನಗಳಿಂದ ನಡೆಯುತ್ತಿದ್ದ ಆಶಾ ಕಾರ್ಯಕರ್ತೆಯರ ಪ್ರತಿಭಟನೆ ಅಂತ್ಯಗೊಳ್ಳುವ ಹಂತಕ್ಕೆ ತಲುಪಿದೆ. ಕಾರ್ಯಕರ್ತೆಯರ ಮನವೊಲಿಸುವಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಯಶಸ್ವಿಯಾಗಿದ್ದು, ಮಾಸಿಕ ಗೌರವಧನವನ್ನು ₹2 ಸಾವಿರ ಹೆಚ್ಚಿಸುವುದಾಗಿ ಘೋಷಿಸಿದ್ದಾರೆ.
ಬೆಂಗಳೂರಿನ ಗೃಹ ಕಚೇರಿಯಲ್ಲಿ ಆಶಾ ಕಾರ್ಯಕರ್ತೆಯರೊಂದಿಗೆ ನಡೆದ ಸಂಧಾನ ಸಭೆಯಲ್ಲಿ ಈ ನಿರ್ಧಾರ ಪ್ರಕಟಿಸಲಾಗಿದೆ. ಆರಂಭದಲ್ಲಿ ಸರ್ಕಾರದ ಪ್ರಸ್ತಾವನೆಗೆ ಒಪ್ಪದ ಕಾರ್ಯಕರ್ತೆಯರು, ಸುದೀರ್ಘ ಚರ್ಚೆಯ ಬಳಿಕ ಹೆಚ್ಚುವರಿ ₹2 ಸಾವಿರ ಗೌರವಧನ ಪಡೆಯಲು ಒಪ್ಪಿಗೆ ಸೂಚಿಸಿದ್ದಾರೆ.
ಈ ಹೆಚ್ಚಳವು 2027ರ ಜನವರಿ 1ರಿಂದಲೇ ಜಾರಿಗೆ ಬರಲಿದೆ. ಪ್ರಸ್ತುತ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಒಟ್ಟು ₹8 ಸಾವಿರ ಗೌರವಧನ ಪಡೆಯುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಇನ್ನು ಮುಂದೆ ₹10 ಸಾವಿರ ದೊರೆಯಲಿದೆ. ಉಳಿದ ಹೆಚ್ಚುವರಿ ₹2 ಸಾವಿರದ ಬೇಡಿಕೆಯನ್ನು ಮುಂದಿನ ಬಜೆಟ್ನಲ್ಲಿ ಪರಿಗಣಿಸಿ ಘೋಷಿಸುವುದಾಗಿ ಸಿಎಂ ಭರವಸೆ ನೀಡಿದ್ದಾರೆ.
ಬೆಳಗ್ಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಕೂಡ ಪ್ರತಿಭಟನೆ ಕೈಬಿಡುವಂತೆ ಮನವಿ ಮಾಡಿದ್ದರು. ಆದರೆ, ಸಚಿವರ ಮನವಿಗೆ ಒಪ್ಪದ ಕಾರ್ಯಕರ್ತೆಯರು ಸಿಎಂ ಜೊತೆಗಿನ ಸಂಧಾನ ಸಭೆಯ ಬಳಿಕ ಪ್ರತಿಭಟನೆ ಅಂತ್ಯಗೊಳಿಸಲು ಸಮ್ಮತಿಸಿದ್ದಾರೆ.

ಆಶಾ ಕಾರ್ಯಕರ್ತೆಯರು ನಮ್ಮ ಆಸ್ತಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದ ಡಿ.ಕೆ. ಶಿವಕುಮಾರ್, ಕೊಟ್ಟ ಮಾತನ್ನು ಉಳಿಸಿಕೊಳ್ಳಬೇಕಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಕಳೆದ ಎರಡು-ಮೂರು ವರ್ಷಗಳಿಂದ ಗೌರವಧನ ಹೆಚ್ಚಳವಾಗಿಲ್ಲ ಎಂಬುದು ಕಾರ್ಯಕರ್ತೆಯರ ಪ್ರಮುಖ ಬೇಡಿಕೆಯಾಗಿತ್ತು.
ಈ ಕುರಿತಂತೆ ಸಾಮಾಜಿಕ ಮಾಧ್ಯಮ X ನಲ್ಲಿ ಮಾಹಿತಿ ಹಂಚಿಕೊಂಡಿರುವ ಮುಖ್ಯಮಂತ್ರಿ .ಶಿವಕುಮಾರ್, ‘ಆಶಾ ಕಾರ್ಯಕರ್ತೆಯರು ನಮ್ಮ ಆಸ್ತಿ: ಜನವರಿ 1ರಿಂದ ₹2,000 ಮಾಸಿಕ ಗೌರವಧನ ಹೆಚ್ಚಳ’ ಖಚಿತ ಎಂದಿದ್ದಾರೆ.
‘ಆಶಾ ಕಾರ್ಯಕರ್ತೆಯರು ನಮ್ಮ ಆಸ್ತಿ. ಅವರ ಸೇವೆಯನ್ನು ಗೌರವಿಸಿ, ಅವರ ಬೇಡಿಕೆಗಳನ್ನು ಈಡೇರಿಸಲು ನಮ್ಮ ಸರ್ಕಾರ ನಿರ್ಧರಿಸಿದೆ. ಪ್ರಸ್ತುತ ಮಾಸಿಕ ಗೌರವಧನವನ್ನು ₹2,000 ಹೆಚ್ಚಿಸಲು ತೀರ್ಮಾನಿಸಲಾಗಿದ್ದು, ಈ ಹೆಚ್ಚಳವು ಜನವರಿ 1, 2027ರಿಂದ ಜಾರಿಗೆ ಬರಲಿದೆ’ ಎಂದಿದ್ದಾರೆ.
ಆಶಾ ಸಹೋದರಿಯರ ಕಷ್ಟಕ್ಕೆ ಸ್ಪಂದಿಸಿ, ಅವರ ಬದುಕಿನಲ್ಲಿ ಭರವಸೆಯ ಬೆಳಕು ಮೂಡಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದವರು ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಆಶಾ ಕಾರ್ಯಕರ್ತೆಯರ ಸಂಘದ ಕಾರ್ಯದರ್ಶಿ ನಾಗಲಕ್ಷ್ಮೀ, ಧನ್ಯವಾದ ತಿಳಿಸಿದ್ದಾರೆ. ಆಶಾ ಕಾರ್ಯಕರ್ತರ ಸಮಸ್ಯೆಗಳಿಗೆ ಸ್ಪಂಧಿಸಿರುವ ಸರ್ಕಾರದ ನಿರ್ಧಾರಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ.
