ನೋಟಿಸ್ ನೀಡದೆ 15 ವರ್ಷ ಬೆಳೆಸಿದ ಅಡಿಕೆ ಮರಗಳ ತೆರವು; ಉನ್ನತ ಮಟ್ಟದ ತನಿಖೆ, ಪರಿಹಾರಕ್ಕೆ ಸಂಸದರ ಒತ್ತಾಯ

0
Arecanut-Trees-Cut-in-Shivamogga

ಶಿವಮೊಗ್ಗ: ಸೊರಬ ತಾಲೂಕಿನ ಆನವಟ್ಟಿ ಹೋಬಳಿಯ ತೇವರತೆಪ್ಪ ಗ್ರಾಮದಲ್ಲಿ ರೈತರು ಸುಮಾರು 15 ವರ್ಷಗಳಿಂದ ಬೆಳೆಸಿದ್ದ ಫಸಲು ನೀಡುತ್ತಿದ್ದ ಅಡಿಕೆ ಮರಗಳನ್ನು ಅಧಿಕಾರಿಗಳು ತೆರವುಗೊಳಿಸಿರುವ ಘಟನೆ ತೀವ್ರ ನೋವು ತಂದಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದ್ದಾರೆ.

ರೈತ ಕುಟುಂಬಗಳ ಜೀವನೋಪಾಯಕ್ಕೆ ಆಧಾರವಾಗಿದ್ದ ಮರಗಳನ್ನು ಯಾವುದೇ ಪೂರ್ವ ನೋಟಿಸ್ ನೀಡದೆ ಕಡಿದು ಹಾಕಿರುವುದರಿಂದ ಅಪಾರ ಆರ್ಥಿಕ ನಷ್ಟ ಉಂಟಾಗಿದೆ. ವರ್ಷಗಳ ಪರಿಶ್ರಮದಿಂದ ಬೆಳೆಸಿದ ಮರಗಳನ್ನು ಕಳೆದುಕೊಂಡಿರುವುದು ಬೇಸರದ ಸಂಗತಿ ಎಂದು ಅವರು ಹೇಳಿದ್ದಾರೆ.

ಈ ಹಿನ್ನೆಲೆಯಲ್ಲಿ ಬಿಜೆಪಿ ಸೊರಬ ಮಂಡಲದ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ರೈತರಿಗೆ ಬೆಂಬಲ ವ್ಯಕ್ತಪಡಿಸಿದರು. ಹಿರಿಯ ನಾಯಕ ಹಾಗೂ ಮಾಜಿ ಸಚಿವ ಹರತಾಳು ಹಾಲಪ್ಪ, ತಾಲೂಕು ಅಧ್ಯಕ್ಷ ಪ್ರಕಾಶ್ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಮತ್ತು ರೈತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಪ್ರಕರಣದ ಕುರಿತು ನಿಷ್ಪಕ್ಷಪಾತ ಉನ್ನತ ಮಟ್ಟದ ತನಿಖೆ ನಡೆಸಬೇಕು. ರೈತರಿಗೆ ಉಂಟಾಗಿರುವ ನಷ್ಟಕ್ಕೆ ಸೂಕ್ತ ಪರಿಹಾರ ನೀಡಿ ನ್ಯಾಯ ಒದಗಿಸಬೇಕು ಎಂದು ರಾಘವೇಂದ್ರ ಆಗ್ರಹಿಸಿದ್ದಾರೆ.

ರೈತರ ಪರಿಶ್ರಮಕ್ಕೆ ಗೌರವ ದೊರೆಯಬೇಕು ಹಾಗೂ ಅವರ ಬದುಕು ಮತ್ತು ಜೀವನೋಪಾಯದ ರಕ್ಷಣೆಗೆ ಬದ್ಧರಾಗಿರುವುದಾಗಿ ಅವರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *