ಪಿರಿಯಾಪಟ್ಟಣ ಬಳಿ ಬಸ್–ಲಾರಿ ಮುಖಾಮುಖಿ ಡಿಕ್ಕಿ: ನಾಲ್ವರು ಸಾವು

ಮೈಸೂರು: ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಕೀರನಹಳ್ಳಿ ಗೇಟ್ ಬಳಿ ಖಾಸಗಿ ಸ್ಲೀಪರ್ ಬಸ್ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಪ್ರಯಾಣಿಕರು ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಶುಕ್ರವಾರ ಮುಂಜಾನೆ ಸುಮಾರು 3.30ರ ವೇಳೆಗೆ ಈ ಅಪಘಾತ ಸಂಭವಿಸಿದೆ. ಮೈಸೂರಿನಿಂದ ಮಡಿಕೇರಿಗೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಬಸ್ ಹಾಗೂ ಮಡಿಕೇರಿ ಕಡೆಯಿಂದ ಮೈಸೂರು ಕಡೆಗೆ ಬರುತ್ತಿದ್ದ ಲಾರಿ ಮುಖಾಮುಖಿಯಾಗಿ ಡಿಕ್ಕಿಯಾಗಿವೆ.

ಡಿಕ್ಕಿಯ ರಭಸಕ್ಕೆ ಬಸ್ ಮತ್ತು ಲಾರಿಯ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತದಲ್ಲಿ ಗಾಯಗೊಂಡಿರುವ ಪ್ರಯಾಣಿಕರನ್ನು ಪಿರಿಯಾಪಟ್ಟಣ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಸಂಬಂಧಪಟ್ಟ ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆ ಕೈಗೊಂಡರು.
