KSRTC, BMTC ಸಿಬ್ಬಂದಿ ಮೇಲೆ ದೌರ್ಜನ್ಯ; ಕೃತ್ಯ ಮರುಕಳಿಸದಂತೆ ಸೂಕ್ತ ಕ್ರಮಕ್ಕೆ ಒತ್ತಾಯಿಸಿ ಗೃಹ ಇಲಾಖೆಗೆ ರಾಮಲಿಂಗಾ ರೆಡ್ಡಿ ಪತ್ರ

ಬೆಂಗಳೂರು: ಸಾರಿಗೆ ಸಂಸ್ಥೆಗಳ ಸಿಬ್ಬಂದಿ ಮೇಲೆ ನಡೆಯುತ್ತಿರುವ ಹಲ್ಲೆ-ದೌರ್ಜನ್ಯ ಕೃತ್ಯಗಳ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಇಂತಹಾ ಘಟನೆಗಳನ್ನು ತಡೆಯಲು ಸೂಕ್ತ ಕ್ರಮವಹಿಸುವಂತೆ ಗೃಹ ಸಚಿವ ಪರಮೇಶ್ವರ್ ಅವರಿಗೆ ಸಲಹೆ ನೀಡಿದ್ದಾರೆ. ಈ ಸಂಬಂಧ ಗೃಹ ಸಚಿವರಿಗೆ ರಾಮಲಿಂಗಾ ರೆಡ್ಡಿ ಬರೆದಿರುವ ಪತ್ರ ಗಮನಸೆಳೆದಿದೆ.
BMTC ಸಿಬ್ಬಂದಿ ಮೇಲೆ ಪದೇಪದೆ ನಡೆಯುತ್ತಿರುವ ಹಲ್ಲೆ ಮತ್ತು ಅವಮಾನದ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ರಾಮಲಿಂಗಾ ರೆಡ್ಡಿ ಒತ್ತಾಯಿಸಿದ್ದಾರೆ. ಈ ಹಿಂದೆಯೂ ಹಲವಾರು ಈ ರೀತಿಯ ಪ್ರಕರಣಗಳು ನಡೆದಿದ್ದು, ಆಯುಕ್ತರು ಬೆಂಗಳೂರುರವರಿಗೆ ಪತ್ರ ಬರೆದು ಸೂಕ್ತ ಕ್ರಮ ತೆಗೆದುಕೊಳ್ಳಲು ಹಾಗೂ ಈ ಸಂಬಂಧ ಖುದ್ದು ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿ ವಿವರಿಸಲು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚಿಸಲಾಗಿದೆ. ಈ ಎಲ್ಲಾ ಕ್ರಮಗಳ ಹೊರತಾಗಿಯೂ ಮತ್ತೊಂದು ಪ್ರಕರಣವು ಎರಡು ದಿನಗಳಿಂದಷ್ಟೇಬೆಳ್ಳಂದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವುದು ಆಘಾತಕಾರಿಯಾಗಿದೆ ಎಂದು ರಾಮಲಿಂಗಾ ರೆಡ್ಡಿಯವರು ಗೃಹ ಸಚಿವರ ಗಮನಸೆಳೆದಿದ್ದಾರೆ.
ಬೆಳ್ಳಂದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ, ಮಹಿಳಾ ಟೆಕ್ಕಿಯೊಬ್ಬರು ತಾವು ಕೋರಿದ ಕಡೆ ಬಸ್ ನಿಲ್ಲಿಸಲಿಲ್ಲ ಎಂಬ ಕಾರಣಕ್ಕೆ ಚಾಲಕ ಹುಸೇನ್ ಮೇಲೆ ಚಪ್ಪಲಿಯಿಂದ ಹಲ್ಲೆ ನಡೆಸಿದ್ದಾರೆ ಎಂದು ವರದಿಯಾಗಿದೆ. ಈ ಸಂಬಂಧ ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಈ ಬೆಳವಣಿಗೆ ಬಗ್ಗೆ ಗೃಹ ಸಚಿವರೊಂದಿಗೆ ಮಾಹಿತಿ ಹಂಚಿಕೊಂಡಿರುವ ರಾಮಲಿಂಗಾ ರೆಡ್ಡಿ, ಇತ್ತೀಚೆಗೆ ಬಸ್ ಚಾಲಕರು ಹಾಗೂ ನಿರ್ವಾಹಕರ ಮೇಲೆ ಇಂತಹ ಹಲ್ಲೆ ಮತ್ತು ಅವಮಾನಿಸುವ ಪ್ರಕರಣಗಳು ಹೆಚ್ಚಾಗುತ್ತಿವೆ. ಕೆಲವು ಕಿಡಿಗೇಡಿಗಳು ಪ್ರಾಣಕ್ಕೆ ಸಂಚಕಾರ ತರುವಂತಹ ಪ್ರಯತ್ನವನ್ನೂ ನಡೆಸಿದ್ದಾರೆ. ಚಾಕುವಿನಿಂದ ಹಲ್ಲೆ ಮಾಡಿದ ಘಟನೆಯೂ ಈ ಹಿಂದೆ ನಡೆದಿತ್ತು. ಹೀಗಾಗಿ, ಇಂತಹ ನಡೆಯನ್ನು ತಪ್ಪಿಸಲು ಪೊಲೀಸ್ ಇಲಾಖೆ ಆರೋಪಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
BMTC, KSRTC ಸೇರಿ ಯಾವುದೇ ಸಾರಿಗೆ ಸಂಸ್ಥೆಯ ಸಿಬ್ಬಂದಿಯ ಹಿತರಕ್ಷಣೆ ನಮ್ಮ ಬದ್ಧತೆಯಾಗಿದ್ದು, ನಮ್ಮ ಇಲಾಖೆಯ ಸಿಬ್ಬಂದಿ ಮೇಲೆ ನಡೆಯುವ ಹಲ್ಲೆ ಮತ್ತು ಅವಮಾನವನ್ನು ಸಹಿಸಲಾಗದು. ನಮ್ಮ ಸಿಬ್ಬಂದಿಯಿಂದ ಏನಾದರೂ ಪ್ರಮಾದವಾದರೆ, ದೂರು ನೀಡಿದ ಕೂಡಲೇ ವಿಚಾರಣೆ ನಡೆಸಿ ತಪ್ಪಿತಸ್ಥರೆಂದು ಕಂಡುಬಂದಲ್ಲಿ ನಾವು ಕೂಡ ಮುಲಾಜಿಲ್ಲದೆ ಅವರ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ. ಆದರೆ, ಕಾನೂನು ಮೀರಿ ಸಿಬ್ಬಂದಿ ಮೇಲೆ ಹಲ್ಲೆ ನಡೆಸುವುದು ಸರಿಯಲ್ಲ. ಹೀಗಾಗಿ, ಇಂತಹವರ ವಿರುದ್ಧ ಸೂಕ್ತ ಕ್ರಮ ಕೈಗೊಂಡು ಈ ರೀತಿಯ ಪ್ತಕರಣಗಳು ಮರುಕಳಿಸದಂತೆ ತಡೆಯಲು ಶಾಶ್ವತ ಪರಿಹಾರವನ್ನು ರೂಪಿಸಬೇಕೆಂದು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರು ಗೃಹ ಇಲಾಖೆಯನ್ನು ಕೋರಿದ್ದಾರೆ.