ದೆಹಲಿ ನೂತನ ಸಿಎಂ ಆಗಿ ರೇಖಾ ಗುಪ್ತಾ; ಕೇಜ್ರಿವಾಲ್ ಮಣಿಸಿದ ಪರ್ವೇಶ್ ವರ್ಮಾಗೆ ಡಿಸಿಎಂ ಸ್ಥಾನ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಗುರುವಾರ ನೂತನ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ. ರೇಖಾ ಗುಪ್ತಾ ಅವರು ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಬುಧವಾರ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಲಿಮಾರ್ ಬಾಗ್ ವಿಧಾನಸಭಾ ಕ್ಷೇತ್ರದ ಶಾಸಕಿ ರೇಖಾ ಗುಪ್ತಾ ಅವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆ ಮಾಡಲಾಯಿತು.
ಇದೇ ವೇಳೆ, ನವದೆಹಲಿ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ವಿರುದ್ಧ ಜಯಗಳಿದ್ದ ಪರ್ವೇಶ್ ವರ್ಮಾ ಅವರನ್ನು ಉಪಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ.
ದೆಹಲಿಯ ನೂತನ ಸಿಎಂ, ಡಿಸಿಎಂ ಹಾಗೂ ಸಂಪುಟ ಸಚಿವರು ಗುರುವಾರ ದೆಹಲಿಯ ರಾಮಲೀಲಾ ಮೈದಾನದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಬಿಜೆಪಿ ನಾಯಕರು ತಿಳಿಸಿದ್ದಾರೆ.