ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಲ್ಲಿ ಹಿನ್ನಡೆ; ಹೈಕೋರ್ಟ್ ಜಾಮೀನು ರದ್ದು

0
vinay-kulkarni

ನವದೆಹಲಿ: ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಲ್ಲಿ ಹಿನ್ನಡೆಯಾಗಿದೆ. ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನನ್ನು ರದ್ದುಗೊಳಿಸಿರುವ ಸುಪ್ರೀಂ ಕೋರ್ಟ್, ಮುಂದಿನ ಎರಡು ವಾರಗಳೊಳಗೆ ನ್ಯಾಯಾಲಯಕ್ಕೆ ಶರಣಾಗುವಂತೆ ಸೂಚಿಸಿದೆ.

ಯೋಗೀಶ್ ಗೌಡ ಕೊಲೆ ಪ್ರಕರಣದ ವಿಚಾರಣೆ ನಡೆಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ವಿನಯ್ ಕುಲಕರ್ಣಿ ಅವರನ್ನು ದೋಷಿ ಎಂದು ಘೋಷಿಸಿ ಜೀವಾವಧಿ ಶಿಕ್ಷೆ ವಿಧಿಸಿತ್ತು. ಈ ಆದೇಶ ಪ್ರಶ್ನಿಸಿ ಅವರು ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್, ಸೆಷನ್ಸ್ ಕೋರ್ಟ್‌ನ ತೀರ್ಪಿಗೆ ತಡೆ ನೀಡಿ ಜಾಮೀನು ಮಂಜೂರು ಮಾಡಿತ್ತು.

ಹೈಕೋರ್ಟ್ ಆದೇಶ ಪ್ರಶ್ನಿಸಿ ಸಿಬಿಐ ಹಾಗೂ ಯೋಗೀಶ್ ಗೌಡ ಅವರ ಸಹೋದರ ಗುರುನಾಥ್ ಗೌಡರ್ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಈ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಇದೀಗ ಜಾಮೀನು ರದ್ದುಗೊಳಿಸಿದೆ.

ಇದರಿಂದ ವಿನಯ್ ಕುಲಕರ್ಣಿ ಮತ್ತೆ ಜೈಲು ಸೇರಬೇಕಾದ ಪರಿಸ್ಥಿತಿ ಎದುರಾಗಿದೆ. ಜೀವಾವಧಿ ಶಿಕ್ಷೆಗೆ ನೀಡಲಾಗಿದ್ದ ತಡೆಯೂ ತೆರವಾಗಿರುವುದರಿಂದ ಅವರ ಶಾಸಕ ಸ್ಥಾನಕ್ಕೆ ಅನರ್ಹತೆಯ ಭೀತಿ ಎದುರಾಗಿದೆ. ಎರಡು ವರ್ಷಕ್ಕಿಂತ ಹೆಚ್ಚಿನ ಶಿಕ್ಷೆ ವಿಧಿಸಲ್ಪಟ್ಟ ಜನಪ್ರತಿನಿಧಿಗಳು ಶಾಸಕ ಸ್ಥಾನ ಕಳೆದುಕೊಳ್ಳುವ ನಿಯಮದ ಹಿನ್ನೆಲೆಯಲ್ಲಿ ಈ ಕುರಿತು ಚರ್ಚೆ ಆರಂಭವಾಗಿದೆ.

ವಿನಯ್ ಕುಲಕರ್ಣಿ ಅವರ ಮೇಲ್ಮನವಿ ಹೈಕೋರ್ಟ್‌ನಲ್ಲಿ ಇನ್ನೂ ಬಾಕಿಯಿದ್ದು, ತುರ್ತು ವಿಚಾರಣೆ ನಡೆಸುವಂತೆ ಮನವಿ ಸಲ್ಲಿಸಬಹುದು. ಹೈಕೋರ್ಟ್‌ನಲ್ಲಿ ಮೇಲ್ಮನವಿ ವಿಚಾರಣೆ ನಡೆದು ಖುಲಾಸೆಗೊಂಡರೆ ಮಾತ್ರ ಅವರಿಗೆ ಪರಿಹಾರ ದೊರೆಯುವ ಸಾಧ್ಯತೆಯಿದೆ.

Leave a Reply

Your email address will not be published. Required fields are marked *