‘ಶಕ್ತಿ’ ಫೈಟ್..! ಸಾಮ್ರಾಟ್ ಟ್ವೀಟ್‌ಗೆ ರಾಮಲಿಂಗಾ ರೆಡ್ಡಿ ಗರಂ; ಬಹಿರಂಗ ಚರ್ಚೆಗೆ ಪಂಥಾಹ್ವಾನ..

ಬೆಂಗಳೂರು: ‘ಶಕ್ತಿ’ ಗ್ಯಾರೆಂಟಿ ಯೋಜನೆ ವಿಚಾರ ಮುಂದಿಟ್ಟು ಸರ್ಕಾರದ ವಿರುದ್ದ ಪ್ರತಿಪಕ್ಷ ಬಿಜೆಪಿ ನಾಯಕರು ಟೀಕಾಸ್ತ್ರ ಪ್ರಯೋಗಿಸುತ್ತಿದ್ದಾರೆ. ಅದರಲ್ಲೂ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್ ಅಶೋಕ್ ಅವರು ಸಾಮಾಜಿಕ ಜಾಲತಾಣ ‘X’ನಲ್ಲಿ ಹಾಕಿರುವ ಪೋಸ್ಟ್ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಕೆಂಡಾ ಮಂಡಲರಾಗಿದ್ದಾರೆ.‌ ಅಶೋಕ್ ಹೇಳಿಕೆ ಬಗ್ಗೆ ಆಕ್ರೋಶ ಹೊರಹಾಕಿರುವ ಸಚಿವ ರಾಮಲಿಂಗಾ ರೆಡ್ಡಿ, ಟ್ವೀಟ್ ಬಿಟ್ಟು ಬಹಿರಂಗ ಚರ್ಚೆಗೆ ಬರುವಂತೆ ಪಂಥಾಹ್ವಾನ ನೀಡಿದ್ದಾರೆ‌

ಈ ಕುರಿತಂತೆ ರಾಮಲಿಂಗ ರೆಡ್ಡಿ ಸಾಮಾಜಿಕ ಜಾಲತಾಣ ‘X’ನಲ್ಲಿ ಎದಿರೇಟು ಎಂಬಂತೆ ಹಾಕಿರುವ ಪೋಸ್ಟ್ ಗಮನಸೆಳೆದಿದೆ. ‘ಶಕ್ತಿ’ ಯೋಜನೆ ಕುರಿತಂತೆ ಅಂಕಿ ಅಂಶಗಳನ್ನು ಮುಂದಿಟ್ಟಿರುವ ಅವರು, ಮೊಣಚು ಮಾತುಗಳಿಂದ ತಿವಿದಿದ್ದಾರೆ.

ತಮಗೆ ಹಾಗೂ ತಮ್ಮ ಪಕ್ಷದವರಿಗೆ ಟ್ಟೀಟ್ ಮಾಡುವುದನ್ನು ಬಿಟ್ಟರೆ ಬೇರೇನೂ ಗೊತ್ತಿಲ್ಲ ಎಂಬುದನ್ನು ಜಗಜಾಹ್ಹೀರು ಮಾಡಿದ್ದೀರಿ ಎಂದು ಅಶೋಕ್ ಅವರನ್ನು ತರಾಟೆಗೆ ತೆಗೆದುಕೊಂಡಿರುವ ರಾಮಲಿಂಗ ರೆಡ್ಡಿ, ಶಕ್ತಿ ಯೋಜನೆಯು ಅಕ್ಷರಶಃ ಸಾರಿಗೆ ನಿಗಮಗಳಿಗೆ ಶಕ್ತಿಯನ್ನು ತುಂಬಿದೆ ಎಂಬುದರಲ್ಲಿ ಎಳ್ಳಷ್ಟೂ ಸಂಶಯವಿಲ್ಲ ಏಕೆಂದರೆ ಅಂಕಿಅಂಶಗಳು ಇದನ್ನು ಸಾಬೀತುಪಡಿಸುತ್ತವೆ. ನಾವು ನಿಮ್ಮಗಳ ರೀತಿ ಗಾಳಿಯಲ್ಲಿ ಗುಂಡು ಹಾರಿಸೊಲ್ಲ, ಅಂಕಿಅಂಶಗಳೇ ನಮ್ಮ‌ ಅಭಿವೃದ್ಧಿಗೆ ಹಾಗೂ ಸಾಧನೆಗೆ ಮಾನದಂಡ ಎಂದು ಬೊಟ್ಟುಮಾಡಿದ್ದಾರೆ.

ಸಾರಿಗೆ ಸಂಸ್ಥೆಗಳಲ್ಲಿ ಕಳೆದ‌ 5 ವರ್ಷದ ತಮ್ಮ ಅಧಿಕಾರಾವಧಿಯಲ್ಲಿ ಯಾವ ಯಾವ ಸಾಧನೆಗಳನ್ನು ಮಾಡಿದ್ದೀರ ಎಂಬ ಪಟ್ಟಿ ಕೊಟ್ಟರೆ ನಾವು ನಿಮ್ಮೊಡನೆ ನೇರಾನೇರ ಚರ್ಚಿಸಲು ಬಯಸುತ್ತೇವೆ‌ ಎಂದು ಪಂಥಾಹ್ವಾನ ನೀಡಿದ್ದಾರೆ.

ಸಾರಿಗೆ ಸಂಸ್ಥೆಗಳನ್ನು ಅಧೋಗತಿ ತಂದು ನಿಲ್ಲಿಸಿರುವುದು ತಮ್ಮ ಅಧಿಕಾರಾವಧಿಯಲ್ಲಿ ಎಂಬ ಕಟುವಾದ ಸತ್ಯ ನಿಮಗೆ‌ ತಿಳಿದಿದ್ದರೂ ಸಹ ಜಾಣ ಕುರುಡು ತೋರುವ ನಿಮ್ಮ ಬಗ್ಗೆ ನನಗೆ ಕನಿಕರವಿದೆ ಎಂದಿರುವ ಸಾರಿಗೆ ಸಚಿವರು, ನಮ್ಮ ಸರ್ಕಾರದ‌ ‘ಶಕ್ತಿ’ ಯೋಜನೆಯಿಂದ ಸಾರಿಗೆ ಸಂಸ್ಥೆಗಳ ಆದಾಯದಲ್ಲಿ‌ ಗಣನೀಯ ವೃದ್ಧಿಯಾದರೂ ಸಾರಿಗೆ ಸಂಸ್ಥೆಗಳಿಗೆ ಶಕ್ತಿ ತುಂಬಲು ಸಾಧ್ಯವಾಗಿಲ್ಲದಿರುವುದು ತಮ್ಮ ಸರ್ಕಾರದ ಕೊಡುಗೆ ಎಂದಿದ್ದಾರೆ.

ಶಕ್ತಿ ಯೋಜನೆಯಿಂದ ದಿನನಿತ್ಯ ಪ್ರಯಾಣಿಸುವ ಪ್ರಯಾಣಿಕರ ಸಂಖ್ಯೆ 84 ಲಕ್ಷದಿಂದ 1.08 ಕೋಟಿಗೆ ಏರಿಕೆ ಆಗಿದೆ. ಆದಾಯದಲ್ಲಿ ಗಣನೀಯ ವೃದ್ಧಿ ಆಗಿದೆ. ನಾನು ಈಗಾಗಲೇ ಹಲವು ಬಾರಿ ತಿಳಿಸಿದ್ದೇನೆ,ಆದಾಯವೇ ಬೇರೆ ಲಾಭವೇ ಬೇರೆ ಎಂದಿರುವ ಸಚಿವ ರಾಮಲಿಂಗ ರೆಡ್ಡಿ, ಬಿ.ಜೆ.ಪಿ ಪಕ್ಷದ ಆಡಳಿತದ ಐದು ವರ್ಷಗಳಲ್ಲಿ ಯಡಿಯೂರಪ್ಪ‌ ಹಾಗೂ ಬೊಮ್ಮಾಯಿ ಮುಖ್ಯಮಂತ್ರಿಗಳಾಗಿದ್ದಾಗ, ಸಾರಿಗೆ ಸಂಸ್ಥೆಗಳನ್ನು ರೂ.5900 ಕೋಟಿ ನಷ್ಟದಲ್ಲಿಟ್ಟು ಹೋಗಿದ್ದಾರೆ. ಕಳೆದ 5 ವರ್ಷಗಳಲ್ಲಿ ಬಿ.ಎಂ.ಟಿ ಸಿ‌ ಹೊರತುಪಡಿಸಿ ಬೇರೆ ಯಾವುದೇ‌ ಸಾರಿಗೆ ನಿಗಮಗಳಿಗೆ ಬಸ್‌ಗಳ ಸೇರ್ಪಡೆಯೇ ಮಾಡದೆ, ಡಕೋಟ ಬಸ್ಸುಗಳನ್ನು ಕಾರ್ಯಾಚರಣೆ‌ ಮಾಡಲು ಬಿಟ್ಟು ಹೋಗಿದ್ದೀರಾ. ನಮ್ಮ ಸರ್ಕಾರ 6200 ಬಸ್ಸುಗಳ ಸೇರ್ಪಡೆಗೆ ಅನುಮೋದನೆ ನೀಡಿದ್ದು, ಕಳೆದೊಂದು ವರ್ಷದಲ್ಲಿಯೇ 3400 ಹೊಸ ಬಸ್ಸುಗಳ ಸೇರ್ಪಡೆಯಾಗಿದೆ. ಡಕೋಟಾ ಬಸ್ಸುಗಳನ್ನು‌ ಪುನಶ್ಚೇತನ‌ ಮಾಡುವ ಕಾರ್ಯವನ್ನು ಸಹ ಕೈಗೆತ್ತಿಕೊಂಡು 1300 ಬಸ್ಸುಗಳ ಪುನಶ್ಚೇತನ ‌ಕಾರ್ಯ‌ಮಾಡಿದ್ದೇವೆ ಎಂದು ಅಶೋಕ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಬಿ.ಜೆ.ಪಿ ಸರ್ಕಾರದ ಅವಧಿಯಲ್ಲಿ ಯಡಿಯೂರಪ್ಪ‌ ಹಾಗೂ ಬೊಮ್ಮಾಯಿ ಮುಖ್ಯಮಂತ್ರಿಗಳಾಗಿದ್ದಾಗ ಕಳೆದ 5 ವರ್ಷಗಳಲ್ಲಿ ಸಾರಿಗೆ ಸಂಸ್ಥೆಗಳಲ್ಲಿ 13888 ಹುದ್ದೆಗಳು ಖಾಲಿ ಇದ್ದರೂ (ನಿವೃತ್ತಿ ಇನ್ನಿತರೆ ಕಾರಣಗಳಿಂದ) ಒಂದೇ ಒಂದು‌ ನೇಮಕಾತಿ ಮಾಡಿಲ್ಲ. ನಮ್ಮ ಸರ್ಕಾರ ಬಂದ ಕೂಡಲೇ 9000 ಹುದ್ದೆಗಳ ನೇಮಕಾತಿಗೆ ಅನುಮೋದನೆ ನೀಡಿದ್ದು, ಈಗಾಗಲೇ 5800 ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆಗಳು ವಿವಿಧ ಹಂತದಲ್ಲಿವೆ. ಬಿ.ಜೆ.ಪಿ ಸರ್ಕಾರದ ಅವಧಿಯಲ್ಲಿ ಸಾರಿಗೆ ಸಂಸ್ಥೆಯ ಸಿಬ್ಬಂದಿಗಳಿಗೆ ತಿಂಗಳ ವೇತನ ಪೂರ್ಣ ಪಾವತಿಯಾಗದೆ , ಅರ್ಧವೇತನ ,ಕೆಲವೊಮ್ಮೆ ಆ ವೇತನವೂ ತಿಂಗಳ ಕೊನೆಯವರೆಗೂ, ಒಮ್ಮೊಮ್ಮೆ ಮುಂದಿನ ತಿಂಗಳವರೆಗೂ ಪಾವತಿಯಾಗುತ್ತಿತ್ತು ಈ ಬಗ್ಗೆ ತಮಗೆ ಮಾಹಿತಿ ಇಲ್ಲವೇ? ನಮ್ಮ ಸರ್ಕಾರ ಬಂದ ಮೇಲೆ ನಿಗದಿತ ದಿನಾಂಕದಂದು ನೌಕರರಿಗೆ ವೇತನ ಪಾವತಿಯಾಗುತ್ತಿದೆ ಎಂದಿರುವ ರಾಮಲಿಂಗ ರೆಡ್ಡಿ, ಸಾರಿಗೆ ಸಂಸ್ಥೆಗಳಲ್ಲಿ ಹತ್ತು ಹಲವು ಕಾರ್ಮಿಕ‌ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ಕಳೆದ ಏಳೆಂಟು ವರ್ಷಗಳಿಂದ ಬಾಕಿ ಉಳಿದಿದ್ದ 1000 ಕ್ಕೂ ಅಧಿಕ ಮೃತ ಅವಲಂಬಿತ‌ ಕುಟುಂಬಗಳಿಗೆ ಅನುಕಂಪ ಆಧಾರದಲ್ಲಿ ಹುದ್ದೆ ನೀಡಲಾಗಿದೆ ಕಳೆದ‌ 5 ವರ್ಷದಲ್ಲಿ ತಮ್ಮ ಸರ್ಕಾರ ಸಂಪೂರ್ಣ ನಿಲ್ಲಿಸಿದ್ದ ಪ್ರಕ್ರಿಯೆ ಇದು ಎಂದಿದ್ದಾರೆ.

ತಮ್ಮ ಸರ್ಕಾರವು ಬಿಟ್ಟು ಹೋಗಿದ್ದ ರೂ.5900 ಕೋಟಿ‌ ನಷ್ಟದಿಂದ ಹೊಣೆಗಾರಿಕೆ ಬಾಕಿಗಳಾದ‌ ಡೀಸೆಲ್ ಹಣ, ಸಿಬ್ಬಂದಿಗಳ ಭವಿಷ್ಯ ನಿಧಿ , ಖರೀದಿ ಸಾಮಾಗ್ರಿಗಳ ಹಣ ಸೇರಿ ಎಲ್ಲಾ ಬಾಕಿ ಗಳನ್ನು ತೀರಿಸುವ ಹೊಣೆಗಾರಿಕೆ ಹೊತ್ತುಕೊಂಡು ನಾವು ಸಂಸ್ಥೆಗಳನ್ನು ಮುನ್ನಡೆಸಬೇಕಾಗಿದೆ ಎಙದಿರುವ ಅವರು, ನಾನು ಎಲ್ಲಿಯೂ ಕೂಡ, ಯಾವುದೇ ವೇದಿಕೆಯಲ್ಲಾಗಲೀ/ ಮಾಧ್ಯಮಕ್ಕಾಗಲೀ ಶಕ್ತಿ ಯೋಜನೆ ನಡೆಸಲು ಸಾರಿಗೆ ಸಂಸ್ಥೆಗಳು ಕಷ್ಟಪಡುತ್ತಿವೆ ಎಂಬ ಹೇಳಿಕೆಯನ್ನೇ ನೀಡಿಲ್ಲ ಈ ಬಗ್ಗೆ ಮಾಧ್ಯಮಗಳಿಗೂ ಸಹ ಈ ರೀತಿಯ ಸುದ್ದಿಗಳನ್ನು ಪ್ರಕಟಿಸುವ ಮುನ್ನ ನಮ್ಮಿಂದ ನಿಖರವಾದ ಮಾಹಿತಿಯನ್ನು ಪಡೆದು ಪ್ರಕಟಿಸುವಂತೆ ತಿಳಿಸಲಾಗಿದೆ. ತಮಗೆ ಜನರನ್ನು ದಾರಿ ತಪ್ಪಿಸಲು ದಿನಕ್ಕೊಂದು ವಿಷಯ ಬೇಕು. ಈ ಖಯಾಲಿ ಬಹಳ ಹಾನಿಕಾರಕವಾದದ್ದು ಸಾಧ್ಯವಾದರೆ ಇದನ್ನು ಸಮಾಜದ ಹಿತದೃಷ್ಟಿಯಿಂದ ಬದಲಿಸಿಕೊಳ್ಳಲು ಪ್ರಯತ್ನಿಸಿ ಎಂದು ಅಶೋಕ್ ಅವರ ಟೀಕೆಗೆ ಎದಿರೇಟು ನೀಡಿದ್ದಾರೆ.

ಶಕ್ತಿ ಯೋಜನೆ ಮಹಿಳಾ ಸಬಲೀಕರಣದ ಯೋಜನೆ ಅದನ್ನು ಗೌರವಿಸುವ ಕೆಲಸ ಮಾಡಿ, ಇನ್ನಾದರೂ ಈ ಯೋಜನೆ ನಿರಾತಂಕವಾಗಿ ನಡೆಯಲು ಅವಕಾಶ ಮಾಡಿಕೊಟ್ಟು , ಮಹಿಳೆಯರಿಗೆ ತಲುಪುತ್ತಿರುವ ಈ ಯಶಸ್ವಿ ಯೋಜನೆಯಲ್ಲಿ ತಮ್ಮದೊಂದು ಅಳಿಲು ಸೇವೆ ಇರುವಂತಾಗಲಿ ಎಂದು ಆಶಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

You may have missed