ಸ್ಮಾರ್ಟ್ ಸಿಟಿ ಯೋಜನೆ ; ರಾಜ್ಯದ ಆರು ನಗರಗಳ ಅಭಿವೃದ್ಧಿ

0
Vinay kumar SORAKE

ಸ್ಮಾರ್ಟ್ ಸಿಟಿ ಯೋಜನೆಗೆ ಆಯ್ಕೆಯಾಗಿರುವ ರಾಜ್ಯದ ಆರು ನಗರಗಳ ಅಭಿವೃದ್ಧಿ ಯೋಜನಾ ವರದಿಯನ್ನು ಸಿದ್ಧಪಡಿಸುತ್ತಿದ್ದು, ಡಿಸೆಂಬರ್ ನಲ್ಲಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ನಗರಾಭಿವೃದ್ಧಿ ಸಚಿವ ವಿನಯ್ ಕುಮಾರ್ ಸೊರಕೆ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ವಿನಯ್ ಕುಮಾರ್ ಸೊರಕೆ, ಸ್ಮಾರ್ಟ್ ಯೋಜನೆಯಡಿ ರಾಜ್ಯದಿಂದ ಆರು ನಗರಗಳನ್ನು ಆಯ್ಕೆ ಮಾಡಲಾಗಿದೆ. ಇದಕ್ಕಾಗಿ ಯೋಜನಾ ವರದಿಯೊಂದನ್ನು ಸಿದ್ಧಪಡಿಸಲಾಗುತ್ತಿದೆ. ಈ ವರದಿ ಆಧರಿಸಿ ಕೇಂದ್ರ ಸರ್ಕಾರ ಪ್ರಸಕ್ತ ಸಾಲಿಗೆ ಸ್ಮಾರ್ಟ್ ಯೋಜನೆಯಡಿಯಲ್ಲಿ 20 ನಗರಗಳನ್ನು ಆಯ್ಕೆ ಮಾಡಲಿದೆ ಎಂದು ತಿಳಿಸಿದರು.

ಡಿಸೆಂಬರ್ 15ರೊಳಗೆ ಯೋಜನಾ ವರದಿಯೊಂದನ್ನು ಸಿದ್ಧಪಡಿಸಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗುತ್ತದೆ. ಈ ವರದಿಯನ್ನು ಸಿದ್ಧಪಡಿಸಲು 6  ನಗರಗಳಲ್ಲಿ  ನೋಡಲ್ ಏಜೆನ್ಸಿಗಳನ್ನು ನೇಮಕ ಮಾಡಿಕೊಳ್ಳಲಾಗಿದೆ. ಇದಕ್ಕಾಗಿ ಹಿರಿಯ ಐಎಎಸ್ ಅಧಿಕಾರಿಗಳನ್ನು ನೇಮಿಸಲಾಗಿದ್ದು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಶಿವಮೊಗ್ಗ, ದಾವಣಗೆರೆ, ತುಮಕೂರು ಹಾಗೂ ಮಂಗಳೂರು ನಗರಗಳು ಸ್ಮಾರ್ಟ್ ಸಿಟಿ ಯೋಜನೆ ವ್ಯಾಪ್ತಿಗೆ ಬರುತ್ತದೆ ಎಂದು ಹೇಳಿದರು.

ಕೇಂದ್ರ ಸರ್ಕಾರದ ಅಮೃತ ಯೋಜನೆಗೆ 27 ಪಟ್ಟಣಗಳನ್ನು ಆಯ್ಕೆ ಮಾಡಲಾಗಿದೆ. ಈ ಯೋಜನೆಗೆ ಪ್ರತಿ ಪಟ್ಟಣಕ್ಕೆ ಐದು ವರ್ಷಗಳಲ್ಲಿ ಇನ್ನೂರು ಕೋಟಿ ರೂಪಾಯಿ ವೆಚ್ಚ ಮಾಡಲಾಗುತ್ತಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರ ತಲಾ ನೂರು ಕೋಟಿ ರೂಪಾಯಿ ಅನುದಾನ ನೀಡಲಿದೆ ಎಂದು ಸೊರಕೆ ತಿಳಿಸಿದರು.

Leave a Reply

Your email address will not be published. Required fields are marked *

You may have missed