ಮಂಡ್ಯದಲ್ಲಿ ಕರ್ನಾಟಕ ರಾಜ್ಯಮಟ್ಟದ ಪದವಿ ಪೂರ್ವ ಕಾಲೇಜುಗಳ ಬಾಸ್ಕೆಟ್‌ಬಾಲ್ ಪಂದ್ಯಾವಳಿಗೆ ಚಾಲನೆ

0
State-Level-PU-College-Basketball-Tournament-in-Mandya

ಮಂಡ್ಯ: ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳು ಪಠ್ಯಪುಸ್ತಕದ ಓದಿಗೆ ಮಾತ್ರ ಸೀಮಿತವಾಗದೆ, ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲೂ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು.

ಮಂಡ್ಯ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ ಹಾಗೂ ಎಸ್.ಬಿ. ಎಜುಕೇಶನ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ರಾಜ್ಯಮಟ್ಟದ ಪದವಿ ಪೂರ್ವ ಕಾಲೇಜುಗಳ ಬಾಸ್ಕೆಟ್‌ಬಾಲ್ ಪಂದ್ಯಾವಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಕ್ರೀಡೆ ವಿದ್ಯಾರ್ಥಿಗಳಲ್ಲಿ ದೈಹಿಕ ಸದೃಢತೆ, ಮಾನಸಿಕ ಸ್ಥೈರ್ಯ, ಶಿಸ್ತು, ತಂಡದ ಮನೋಭಾವ ಮತ್ತು ನಾಯಕತ್ವದ ಗುಣಗಳನ್ನು ಬೆಳೆಸುತ್ತದೆ. ರಾಜ್ಯಮಟ್ಟದ ಪಂದ್ಯಾವಳಿಯಲ್ಲಿ ಭಾಗವಹಿಸುವುದು ವಿದ್ಯಾರ್ಥಿಗಳಿಗೆ ಸುವರ್ಣಾವಕಾಶವಾಗಿದೆ ಎಂದರು.

ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಿ ಕ್ರೀಡಾಸ್ಫೂರ್ತಿಯಿಂದ ಆಡಬೇಕು. ಗೆಲುವಿನ ಒತ್ತಡಕ್ಕೆ ಒಳಗಾಗದೆ ಪ್ರತಿಭೆ ಪ್ರದರ್ಶಿಸುವುದಕ್ಕೆ ಆದ್ಯತೆ ನೀಡಬೇಕು. ಕ್ರೀಡಾ ಪ್ರತಿಭೆಗಳಿಗೆ ಪ್ರೋತ್ಸಾಹ ಹಾಗೂ ಉತ್ತಮ ಮೂಲಸೌಕರ್ಯ ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.

ಬಳಿಕ ವಿವಿಧ ತಂಡಗಳ ಆಟಗಾರರನ್ನು ಪರಿಚಯಿಸಿಕೊಂಡ ಸಚಿವರು, ಸ್ವತಃ ಬಾಸ್ಕೆಟ್‌ಬಾಲ್ ಆಡುವ ಮೂಲಕ ಪಂದ್ಯಾವಳಿಗೆ ಚಾಲನೆ ನೀಡಿದರು.

ಜಿಲ್ಲಾಧಿಕಾರಿ ಡಾ. ಕುಮಾರ, ಶಾಸಕ ರವಿಕುಮಾರ್ ಗಣಿಗ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ನಾಗೇಶ್, ರಾಜ್ಯ ಲೇಖಕಿಯರ ಸಂಘದ ಅಧ್ಯಕ್ಷೆ ಮೀರಾ ಶಿವಲಿಂಗಯ್ಯ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *