ಆಂಧ್ರಪ್ರದೇಶದ ಕರ್ನೂಲ್ ಅಪಘಾತ; ಕರ್ನಾಟಕದ 8 ಮಂದಿ ಸಾವು

0
Accident-road closed

ರಾಯಚೂರು,: ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಮಂತ್ರಾಲಯ ತಾಲೂಕಿನ ಕಲ್ಲುದೇವಕುಂಟ ಗ್ರಾಮದ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕರ್ನಾಟಕದ ಎಂಟು ಮಂದಿ ಭಕ್ತರು ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ.

ಚಿಕ್ಕಮಗಳೂರು ಮೂಲದ 21 ಮಂದಿ ಭಕ್ತರು ಮಂತ್ರಾಲಯ ರಾಯರ ದರ್ಶನಕ್ಕಾಗಿ ಬೊಲೆರೊ ವಾಹನದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಎದುರುಗಡೆಯಿಂದ ವೇಗವಾಗಿ ಬಂದ ಸಿಮೆಂಟ್ ಹಾಗೂ ಜಲ್ಲಿಕಲ್ಲು ತುಂಬಿದ್ದ ಟ್ಯಾಂಕರ್, ಬೊಲೆರೊಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ನಡೆದಿದೆ.

ಡಿಕ್ಕಿಯ ತೀವ್ರತೆಗೆ ಆರು ಮಂದಿ ಸ್ಥಳದಲ್ಲೇ ಮೃತಪಟ್ಟರೆ, ಗಂಭೀರವಾಗಿ ಗಾಯಗೊಂಡ ಇನ್ನಿಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಮೃತರನ್ನು ಯಶೋಧಾ(60), ಪುಟ್ಟಮ್ಮ(55), ಕುಮಾರ್(50), ದೀಪಿಕಾ, ವೀಣಾ(42), ಸುನೀಲ್(40), ಲೋಲಾಕ್ಷಿ ಹಾಗೂ ಐದು ವರ್ಷದ ಬಾಲಕಿ ಬೆಳ್ಳಿ ಎಂದು ಗುರುತಿಸಲಾಗಿದೆ.

ಅಪಘಾತದಲ್ಲಿ ಗಾಯಗೊಂಡ ಉಳಿದ 13 ಮಂದಿಯನ್ನು ತಕ್ಷಣವೇ ಎಮಿಗನೂರು ಮತ್ತು ಕರ್ನೂಲ್ ಸರ್ಕಾರಿ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನಾ ಸ್ಥಳಕ್ಕೆ ಮಂತ್ರಾಲಯ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಟ್ಯಾಂಕರ್ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣ ಸಂಬಂಧ ತನಿಖೆ ಮುಂದುವರಿದಿದೆ.

ಈ ದುರ್ಘಟನೆಯಿಂದ ಮಂತ್ರಾಲಯ ಮಾರ್ಗದಲ್ಲಿ ಕೆಲಕಾಲ ಸಂಚಾರ ವ್ಯತ್ಯಯ ಉಂಟಾಗಿದ್ದು, ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Leave a Reply

Your email address will not be published. Required fields are marked *