ಅಡೂರು ಕನ್ನಡ ಶಾಲೆ ಬಗ್ಗೆ ಕೇರಳ ಹೈಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು: ಗಡಿನಾಡು ಕಾಸರಗೋಡು ಜಿಲ್ಲೆಯ ಅಡೂರು ಕನ್ನಡ ಶಾಲೆಗೆ ಮಲೆಯಾಳಿ ಭಾಷಿಕ ಶಿಕ್ಷಕರಿರುವ ಸ್ಥಾನಕ್ಕೆ ಕನ್ನಡ ಭಾಷೆ ತಿಳಿದಿರುವ ಶಿಕ್ಷಕರನ್ನು ನೇಮಿಸುವಂತೆ ಕೇರಳ ಸರಕಾರಕ್ಕೆ ಕೇರಳ ಹೈಕೋರ್ಟ್ ನಿರ್ದೇಶನ ನೀಡಿರುವುದು ಅತ್ಯಂತ ಸಂತೋಷ ತಂದಿದೆ, ಇದರ ಮೂಲಕ ದೇಶದ ನ್ಯಾಯಾಂಗ ವ್ಯವಸ್ಥೆಯ ಮೇಲಿನ ಜನಸಾಮಾನ್ಯರ ನಂಬಿಕೆ ಮತ್ತಷ್ಟು ಬಲಗೊಂಡಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ.
ಕಾಸರಗೋಡಿನ ಅಡೂರು ಶಾಲೆಗೆ ಮಲೆಯಾಳ ಶಿಕ್ಷಕಿ ನೇಮಕದಿಂದಾಗಿ ಕಳೆದ ವರ್ಷ ಉದುಮ ಮತ್ತು ಹೊಸಕೋಟೆ ಸರ್ಕಾರಿ ಪ್ರೌಢಶಾಲೆಗಳ ಕನ್ನಡ ವಿಭಾಗಗಳಿಗೆ ಮಲಯಾಳ ಭಾಷೆ ಮಾತ್ರ ತಿಳಿದಿರುವ ಸಮಾಜ ವಿಜ್ಞಾನ ಶಿಕ್ಷಕರನ್ನು ನೇಮಿಸಲಾಗಿತ್ತು. ಉದುಮ ಪ್ರೌಢಶಾಲೆಗೆ ಕೂಡ ಇದೇ ರೀತಿ ಶಿಕ್ಷಕಿ ನೇಮಕಗೊಂಡಿದ್ದರು. ಇದನ್ನು ವಿರೋಧಿಸಿ ವಿದ್ಯಾರ್ಥಿಗಳು ಹಾಗೂ ಪೋಷಕರು ಸೇರಿದಂತೆ ಗಡಿನಾಡಿನ ಕನ್ನಡ ಹೋರಾಟಗಾರರು ಸೇರಿ ಪ್ರತಿಭಟನೆ ನಡೆಸಿದ್ದರು. ಜೊತೆಗೆ ಈ ಕುರಿತು ಕೇರಳ ಹೈಕೋರ್ಟ್ ಮೆಟ್ಟಿಲೇರಿದ್ದರು.
ಇದೀಗ ಅಡೂರು ಶಾಲೆಯಲ್ಲಿ ಕನ್ನಡ ಮಾಧ್ಯಮಕ್ಕೆ ಮಲಯಾಳ ಶಿಕ್ಷಕಿ ಪಾಠ ಮಾಡುವಂತಿಲ್ಲ ಎಂದು ಕೇರಳ ಹೈಕೋರ್ಟ್ ತೀರ್ಪು ನೀಡಿರುವುದು ಗಡಿನಾಡ ಕನ್ನಡಿಗರ ಹೋರಾಟಕ್ಕೆ ಸಂದ ಜಯವಾಗಿದೆ. ಕಾಸರಗೋಡಿನ ಕನ್ನಡಿಗರ ಹೋರಾಟಕ್ಕೆ ಕೇರಳ ಹೈಕೋರ್ಟ್ನಲ್ಲಿ ಮಹತ್ವದ ಜಯ ಲಭಿಸಿದ್ದು ಸಮಸ್ತ ಕನ್ನಡಿಗರಿಗೆ ಸಂತೋಷ ತಂದಿದೆ. ಮಲಯಾಳಿ ಭಾಷಿಕ ಶಿಕ್ಷಕಿಗೆ ಕನ್ನಡದಲ್ಲಿ ವ್ಯವಹರಿಸಲು ತಿಳಿಯದು ಎಂಬುದನ್ನು ಅರ್ಥೈಸಿಕೊಂಡಿರುವ ನ್ಯಾಯಾಲಯ, ಕೂಡಲೇ ಆ ಶಿಕ್ಷಕಿಯನ್ನು ಬೇರೆ ಶಾಲೆಗೆ ವರ್ಗಾಯಿಸಿ ತಕ್ಷಣವೇ ಅವರ ಸ್ಥಾನಕ್ಕೆ ಕನ್ನಡ ತಿಳಿದಿರುವ ಶಿಕ್ಷಕರನ್ನು ನೇಮಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿರುವುದು ಮಾತೃ ಭಾಷಾ ಶಿಕ್ಷಣದ ವಾದಕ್ಕೆ ಕಾನೂನು ಮಾನ್ಯತೆ ದೊರೆತಂತಾಗಿದೆ. ಒಟ್ಟಾರೆ ಇದೊಂದು ಐತಿಹಾಸಿಕ ತೀರ್ಪಾಗಿದೆ ಎಂದು ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ.