ತೆಲಂಗಾಣದಲ್ಲಿ ಭೀಕರ ಅಪಘಾತ; ಆಟೋಗೆ ಟ್ಯಾಂಕರ್ ಡಿಕ್ಕಿ, 6 ಮಂದಿ ಸಾವು

0
Accident-road-closed-300x186-1-2

ಸಂಗಾರೆಡ್ಡಿ: ವೇಗವಾಗಿ ಬಂದ ಟ್ಯಾಂಕರ್ ಲಾರಿಯೊಂದು ಆಟೋ ರಿಕ್ಷಾಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಮಹಿಳೆಯರು ಸೇರಿದಂತೆ ಆರು ಮಂದಿ ಮೃತಪಟ್ಟಿದ್ದು, ಆರು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಜಹೀರಾಬಾದ್ ಮಂಡಲದ ಸತ್ವಾರ್ ಗ್ರಾಮದ ಬಳಿ ನಡೆದಿದೆ.

ಆಟೋ ರಿಕ್ಷಾ ಯೂಟರ್ನ್ ತೆಗೆದುಕೊಳ್ಳುತ್ತಿದ್ದ ಸಂದರ್ಭದಲ್ಲಿ ವೇಗವಾಗಿ ಬಂದ ಟ್ಯಾಂಕರ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದ ವೇಳೆ ಆಟೋದಲ್ಲಿ ಒಟ್ಟು 12 ಮಂದಿ ಪ್ರಯಾಣಿಸುತ್ತಿದ್ದರು. ಮೃತರು ಹಾಗೂ ಗಾಯಾಳುಗಳು ಕರ್ನಾಟಕದ ಬೀದರ್ ಜಿಲ್ಲೆಯ ರಾಜ್‌ಗೇರಾ ಗ್ರಾಮದ ನಿವಾಸಿಗಳು ಎಂದು ಪೊಲೀಸರು ತಿಳಿಸಿದ್ದಾರೆ.

ಅಪಘಾತದಲ್ಲಿ ರೇಖಾ, ಶ್ರೀದೇವಿ, ಕವಿತಾ, ರೇಷ್ಮಾ, ನಿಖಿತಾ ಹಾಗೂ ಆಟೋ ಚಾಲಕ ದೇವದಾಸ್ ಮೃತಪಟ್ಟಿದ್ದಾರೆ. ನಿರ್ಮಲಾ, ತುಳಜಮ್ಮ, ಚಂದ್ರಕಲಾ, ರಾಧಿಕಾ, ಶಿಲ್ಪಾ ಮತ್ತು ಶೋಭಾ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಅಪಘಾತದ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಈ ನಡುವೆ, ಬೀದರ್‌ನ ಬ್ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳ ಆರೋಗ್ಯವನ್ನು ಸಚಿವ ಈಶ್ವರ್ ಖಂಡ್ರೆ ವಿಚಾರಿಸಿದರು. ಕುಟುಂಬಸ್ಥರಿಗೆ ಧೈರ್ಯ ತುಂಬಿದ ಅವರು, ಗಾಯಾಳುಗಳಿಗೆ ಅಗತ್ಯ ಚಿಕಿತ್ಸೆಯನ್ನು ಒದಗಿಸುವಂತೆ ವೈದ್ಯರಿಗೆ ಸೂಚಿಸಿದರು. ಮೃತರ ಕುಟುಂಬಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ತಲಾ ₹5 ಲಕ್ಷ ಪರಿಹಾರ ನೀಡಲಾಗುವುದು. ಮೃತರ ಕುಟುಂಬಗಳು ಹಾಗೂ ಗಾಯಾಳುಗಳ ನೆರವಿಗೆ ಸರ್ಕಾರ ನಿಲ್ಲಲಿದೆ ಎಂದು ಸಚಿವರು ಭರವಸೆ ನೀಡಿದರು.

Leave a Reply

Your email address will not be published. Required fields are marked *