ಬ್ಯಾನರ್‌ ತೆರವು ಗಲಾಟೆ; ಕಡೂರು ಬಳಿ ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ

0
police hoysala- clash- village

ಕಡೂರು: ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ದತ್ತ ಜಯಂತಿ ಬ್ಯಾನರ್‌ ತೆರವು ವಿವಾದ ಸಣ್ಣ ಗಲಾಟೆಯಾಗಿ ಆರಂಭಗೊಂಡಿದ್ದು, ಕೊನೆಗೆ ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ (40) ಅವರ ಮೇಲೆ ನಡೆದ ಮಾರಣಾಂತಿಕ ದಾಳಿಗೆ ಕಾರಣವಾಗಿದೆ.

ಪ್ರಾಥಮಿಕ ತನಿಖೆ ಪ್ರಕಾರ, ಸಂಜಯ್ ಮತ್ತು ಮಿಥುನ್ ಎಂಬ ಯುವಕರು ಮಚ್ಚುಗಳಿಂದ ದಾಳಿ ನಡೆಸಿ ಗಣೇಶ್ ಅವರನ್ನು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಐವರನ್ನು ವಶಕ್ಕೆ ಪಡೆಯಲಾಗಿದೆ. ದಾಳಿಯಲ್ಲಿ ಆರೋಪಿ ಸಂಜಯ್ ತೀವ್ರವಾಗಿ ಗಾಯಗೊಂಡಿದ್ದು, ಚಿಕ್ಕಮಗಳೂರಿನ ಮಲ್ಲೇಗೌಡ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.

ಗಣೇಶ್ ಗೌಡ ಅವರು ಸಖರಾಯಪಟ್ಟಣ ಗ್ರಾಮ ಪಂಚಾಯಿತಿ ಸದಸ್ಯರಾಗಿದ್ದು, ಸ್ಥಳೀಯ ರಾಜಕೀಯದಲ್ಲಿ ಸಕ್ರಿಯ ಮುಖವಾಗಿದ್ದರು. ಘಟನೆಯ ವೇಳೆ ಅವರು ಕಾರಿನಲ್ಲಿ ತೆರಳುತ್ತಿದ್ದಾಗ, ಕಲ್ಮರಡಿ ಮಠದ ಸಮೀಪ ಬೈಕ್‌ನಲ್ಲಿ ಹಿಂಬಾಲಿಸಿ ಬಂದ ಆರೋಪಿಗಳು ಕಾರನ್ನು ಅಡ್ಡಗಟ್ಟಿ ಮಚ್ಚುಗಳಿಂದ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಧಾವಿಸಿದ ಪೊಲೀಸರು ಮಚ್ಚು ಸೇರಿದಂತೆ ಕೆಲವು ಪುರಾವೆಗಳನ್ನು ವಶಪಡಿಸಿಕೊಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

You may have missed