ಮುಡಾ ಪ್ರಕರಣ: ಇಡೀ ವರದಿ ರಾಜಕೀಯ ಪ್ರೇರಿತ ಎಂದ ಸಿಎಂ
ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ವರದಿ ರಾಜಕೀಯ ಪ್ರೇರಿತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಣದ ಅಕ್ರಮ ವರ್ಗಾವಣೆ ಆಗಿರುವ ಬಗ್ಗೆ ಯಾವುದೇ ಸಾಕ್ಷಿಯಿಲ್ಲ. ಮುಡಾದ ಮಾಜಿ ಆಯುಕ್ತ ನಟೇಶ್ ಅವರ ಮೇಲೆ ಇಡಿ ಯವರ ಕ್ರಮ ಕಾನೂನು ಬಾಹಿರ ಮತ್ತು ಮನಿಲ್ಯಾಂಡ್ರಿಂಗ್ ಅಗಿಲ್ಲ ಎಂದು ಹೈಕೋರ್ಟ್ ಹೇಳಿದೆ. ಇಡಿ ಯ ಸಂಪೂರ್ಣ ವರದಿಯನ್ನು ಮಾಧ್ಯಮದಲ್ಲಿ ಬಿಡುಗಡೆ ಮಾಡುವ ಮೂಲಕ ಸಂಪೂರ್ಣ ಪ್ರಕರಣವನ್ನು ಉದ್ದೇಶಪೂರ್ವಕವಾಗಿ ರಾಜಕೀಯಗೊಳಿಸಿದ್ದಾರೆ. ಸರ್ಕಾರ ಹಾಗೂ ಮುಖ್ಯಮಂತ್ರಿ ಹುದ್ದೆಯ ವರ್ಚಸ್ಸಿಗೆ ಕುಂದು ತರುವಂತಹ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದರು.
ಕರ್ನಾಟಕದ ಮುಖ್ಯಮಂತ್ರಿಯಾಗಿರುವ ಕಾರಣದಿಂದ ನನ್ನ ತೇಜೋವಧೆ ಮಾಡಲಾಗುತ್ತಿದೆ. ನನ್ನ ಶ್ರೀಮತಿಯವರಿಗೆ ಇಡಿ ಯವರ ನೋಟೀಸ್ ಬಂದ ಹಿನ್ನೆಲೆಯಲ್ಲಿ ನ್ಯಾಯಾಲಯದಿಂದ ತಡೆಯಾಜ್ಞೆಯನ್ನು ತರಲಾಗಿದೆ. ನನ್ನ ವರ್ಚಸ್ಸಿಗೆ ಭಂಗ ತರಬೇಕೇಂಬ ದುರುದ್ದೇಶದಿಂದ, ಇಂತಹ ಕುಕೃತ್ಯಗಳನ್ನು ಮಾಡಲಾಗುತ್ತಿದೆ. ಆದರೆ ಅವರ ಪ್ರಯತ್ನಗಳು ಸಫಲವಾಗಲು ಸಾಧ್ಯವಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.